ಬೀದರ್: ಜಿಲ್ಲೆಯಾದ್ಯಂತ ಗುರುವಾರ (ಜು.27) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಬುಧವಾರ ಆದೇಶ ಹೊರಡಿಸಿದೆ.
‘ಗುರುವಾರ ಜಿಲ್ಲೆಯಲ್ಲಿ 100ರಿಂದ 130 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ವರ್ಷಧಾರೆ ಆಗಬಹುದು. ಜನ ಅನವಶ್ಯಕವಾಗಿ ಮನೆಯಿಂದ ಹೊರಗೆ ಹೋಗಬಾರದು. ತಗ್ಗು ಪ್ರದೇಶ, ನದಿ ಪಾತ್ರಗಳಲ್ಲಿ ಓಡಾಡಬಾರದು. ರಸ್ತೆ, ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದರೆ ದಾಟಬಾರದು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.
ನದಿಗೆ ನೀರು:
ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಕಾರಂಜಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸೋಮವಾರ ರಾತ್ರಿಯಿಂದ ನದಿಗೆ ನೀರು ಹರಿಸಲಾಗುತ್ತಿದೆ. 7.691 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 6.801 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. 5,040 ಕ್ಯುಸೆಕ್ ಒಳಹರಿವು ಇದ್ದು, 5,300 ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಜಲಾಶಯಕ್ಕೆ ಸತತವಾಗಿ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಗೆ ಹರಿಸುವ ನೀರಿನ ಪ್ರಮಾಣ ಕೂಡ ಹೆಚ್ಚಿಸಲಾಗುವುದು. ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ.
ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬುಧವಾರ ಬೆಳಿಗ್ಗೆ ಕೆಲಕಾಲ ಜಿಟಿಜಿಟಿ ಮಳೆ ಸುರಿಯಿತು. ದಿನವಿಡೀ ದಟ್ಟ ಕಾರ್ಮೋಡ ಕವಿದಿತ್ತು. ಆದರೆ, ಮಳೆಯ ಸುಳಿವು ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.