ಬೀದರ್: ‘ಕೃಷಿ ಜೊತೆಗೆ ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ, ಕುರಿ ಸಾಕಾಣಿಕೆ ಮಾಡಿದರೆ ಆರ್ಥಿಕವಾಗಿ ಸದೃಢರಾಗಬಹುದು’ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ನರಸಪ್ಪ ಎ.ಡಿ. ತಿಳಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು, ಬೀದರ್ ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಸಹಕಾರ ಇಲಾಖೆಯ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ರೈತ ಸದಸ್ಯರ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೀದರ್ ಜಿಲ್ಲೆಯಲ್ಲಿ ಕೋಳಿ ಸಾಕಾಣಿಕೆ ತುಂಬಾ ಕಡಿಮೆ ಇದೆ. ಜ್ಞಾನ ಹಾಗೂ ಪರಿಶ್ರಮದಿಂದ ಆದಾಯ ಪಡೆಯಬಹುದು. ಎಷ್ಟೇ ಕಲಿತರೂ ಹೊಸ ಹೊಸ ವಿಚಾರಗಳನ್ನು ತಿಳಿಯಬೇಕಾದರೆ ತರಬೇತಿಗಳು ಬಹಳ ಮುಖ್ಯ. ಮುಂದುವರಿದ ಜಗತ್ತಿನಲ್ಲಿ ಹೊಸ ಹೊಸ ವಿಷಯಗಳ ಬಗ್ಗೆ ತಿಳಿಯಬೇಕು ಎಂದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕಿ ನೀಲಾಂಬಿಕಾ ಮಾತನಾಡಿ,‘ಮೀನುಗಾರಿಕೆ ಸಹಕಾರ ಸಂಘಗಳು, ಪತ್ತಿನ ಸಂಘಗಳು, ಕುರಿ ಮತ್ತು ಕೋಳಿ ಸಾಕಾಣಿಕೆ ಸಂಘಗಳಿಗೆ ತರಬೇತಿಯ ಅಗತ್ಯವಿದೆ’ ಎಂದು ಹೇಳಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಸೋಮಶೇಖರ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಗುಂಡಪ್ಪ, ಪ್ರಗತಿಪರ ರೈತ ಸಂಜೀವಕುಮಾರ, ಸಹಾಯಕ ಪ್ರಾಧ್ಯಾಪಕ ಡಾ.ವಿದ್ಯಾಸಾಗರ, ಸಿಇಒ ಎಚ್.ಆರ್. ಮಲ್ಲಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.