ADVERTISEMENT

ರೈತರ ನಿರ್ಲಕ್ಷಿಸಿದ ರಾಜ್ಯ ಸರ್ಕಾರ: ಎ.ಎಸ್‌.ಪಾಟೀಲ ನಡಹಳ್ಳಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 4:38 IST
Last Updated 5 ಮಾರ್ಚ್ 2024, 4:38 IST
<div class="paragraphs"><p>ಎ.ಎಸ್‌.ಪಾಟೀಲ ನಡಹಳ್ಳಿ</p></div>

ಎ.ಎಸ್‌.ಪಾಟೀಲ ನಡಹಳ್ಳಿ

   

ಚಾಮರಾಜನಗರ: ‘ಬರಗಾಲದಿಂದಾಗಿ ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ರೈತರನ್ನು ನಿರ್ಲಕ್ಷ್ಯ ಮಾಡಿದೆ’ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್‌.ಪಾಟೀಲ ನಡಹಳ್ಳಿ ಸೋಮವಾರ ಆರೋಪಿಸಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನೀರು ಇಲ್ಲದಿರುವಾಗ ತಮಿಳುನಾಡಿಗೆ ಹರಿಸುವ ಬದಲು, ಈ ಭಾಗದ ಕೆರೆಗಳಿಗೆ ನೀರು ತುಂಬಿಸಿದ್ದರೆ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತಿತ್ತು’ ಎಂದರು. 

ADVERTISEMENT

‘ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 2008ರಲ್ಲಿ ಯಡಿಯೂರಪ್ಪ ಚಾಲನೆ ನೀಡಿದ್ದರು. ಆದರೆ, ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ಅದನ್ನು ಮುಂದುವರಿಸುವ ಕೆಲಸ ಮಾಡಿಲ್ಲ. ಇದರಿಂದ ಅಂತರ್ಜಲ ಮಟ್ಟ ಕುಸಿದಿದ್ದು ರೈತರ ಫಸಲು ನಾಶವಾಗುತ್ತಿದೆ’ ಎಂದು ದೂರಿದರು. 

‘ಅಧಿಕಾರಕ್ಕೆ ಬಂದರೆ ಪ್ರತಿ ಲೀಟರ್‌ ಹಾಲಿಗೆ ₹7 ಪ್ರೋತ್ಸಾಹಧನ ನೀಡುವುದಾಗಿ ಕಾಂಗ್ರೆಸ್‌ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಅದನ್ನು ಈಡೇರಿಸಿಲ್ಲ. ಈಗ ಬರಗಾಲವಿದ್ದು  ಪ್ರತಿ ಗ್ರಾಮ ಪ‍ಂಚಾಯಿತಿಗೊಂದು ಗೋಶಾಲೆ ತೆರೆಯಬೇಕು. ರೈತರಿಗೆ ಮೇವಿನ ಬೀಜ ವಿತರಿಸಿ ಮೇವು ಬೆಳೆಯಲು ಅವಕಾಶ ಕಲ್ಪಿಸಬೇಕು. ಹಗಲಿನಲ್ಲಿ ನಿತ್ಯ 5 ಗಂಟೆ ವಿದ್ಯುತ್ ನೀಡಬೇಕು’ ಎಂದು ಆಗ್ರಹಿಸಿದರು. 

ರೈತ ವಿರೋಧಿ ಬಜೆಟ್‌: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ವಿರೋಧಿ ಬಜೆಟ್‌ ಮಂಡಿಸಿದ್ದಾರೆ. ರೈತರಿಗೆ ಸಹಾಯ ಮಾಡುವ ಯೋಜನೆ ಜಾರಿಗೆ ತಂದಿಲ್ಲ. ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯುತ್‌ ವೇತನ ನಿಲ್ಲಿಸಲಾಗಿದೆ. ಇದರ ವಿರುದ್ಧ ಬಿಜೆಪಿಯು ದೊಡ್ಡ ಮಟ್ಟದ ಹೋರಾಟ ಮಾಡಲಿದೆ’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಬರಪರಿಸ್ಥಿತಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿಲ್ಲ. ಮೇವು ಕೇಂದ್ರ ಸ್ಥಾಪನೆಗೆ ಮುಂದಾಗಿಲ್ಲ. ರೈತರಿಗೆ ನೀಡಬೇಕಾದ ಪರಿಹಾರ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಎಂ.ರುದ್ರೇಶ್, ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್, ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.