ಚಾಮರಾಜನಗರ: ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಬಾಲಕಾರ್ಮಿಕರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಶನಿವಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲಕಾರ್ಮಿಕರ ನಿರ್ಮೂಲನೆ ಕುರಿತ ಜಿಲ್ಲಾಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ದತಿ ಹಾಗೂ ಬಾಲ್ಯವಿವಾಹಗಳು ಜೀವಂತವಾಗಿವೆ. ಬಡತನ ಹಾಗೂ ಇತರೆ ಕಾರಣಗಳಿಂದ ಮಕ್ಕಳ ಬಾಲ್ಯವನ್ನು ಕಸಿಯುತ್ತಿರುವುದು ದೊಡ್ಡ ದುರಂತ. ಈ ಸಾಮಾಜಿಕ ಅನಿಷ್ಟ ಪದ್ದತಿಗಳ ನಿರ್ಮೂಲನೆಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಬಾಲಕಾರ್ಮಿಕರನ್ನು ಗುರುತಿಸುವಿಕೆಗೆ ಜಿಲ್ಲಾಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ವೈಯಕ್ತಿಕ ಗಮನಹರಿಸಬೇಕು’ ಎಂದರು.
‘ಟಾಸ್ಕ್‌ಪೋರ್ಸ್ ಸಮಿತಿಯು 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅಂತ್ಯದವರೆಗೆ ಬಾಲ್ಯಾವಸ್ಥೆಯ 3 ಮಕ್ಕಳು ಹಾಗೂ ಕಿಶೋರಾವಸ್ಥೆಯ 18 ಬಾಲಕಾರ್ಮಿಕ ಮಕ್ಕಳನ್ನು ಗುರುತಿಸಿದೆ. ಈ ಪೈಕಿ ನೇರವಾಗಿ ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿರುವ ಆರು ಮಕ್ಕಳು ಹಾಗೂ ಅವರ ಕಲಿಕಾ ಪ್ರಕ್ರಿಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ವರದಿ ಸಲ್ಲಿಸಬೇಕು. ಶಾಲೆಯಿಂದ ಹೊರಗುಳಿದ ಯಾವುದೇ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಮರಳಿ ಶಾಲೆಗೆ ಕರೆತರುವಲ್ಲಿ ತಾಲ್ಲೂಕು, ಜಿಲ್ಲಾಮಟ್ಟದ ಟಾಸ್ಕ್‌ಪೋರ್ಸ್ ಸಮಿತಿಗಳು ಸಕ್ರಿಯರಾಗಬೇಕು’ ಎಂದರು.
‘ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಬಾಲಕಾರ್ಮಿಕ ಮಕ್ಕಳನ್ನು ಗುರುತಿಸುವ ಕೆಲಸವಾಗಬೇಕು. ಗುರುತಿಸುವಿಕೆ ಕಾರ್ಯಕ್ಕೆ ಪಂಚಾಯಿತಿ ಸದಸ್ಯರ ಸಭೆ ನಡೆಸಿ ಅವರ ಸಹಕಾರ ಪಡೆಯಬೇಕು. ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು. ಈ ಬಗ್ಗೆ ಟಾಸ್ಕ್‌ಪೋರ್ಸ್ ಸಮಿತಿಗಳು ಖಚಿತ ಪಡಿಸಿಕೊಳ್ಳಬೇಕು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳ ಪ್ರವೇಶದ್ವಾರ, ಸರ್ಕಾರಿ ಕಚೇರಿಗಳು, ಬಸ್ ನಿಲ್ದಾಣಗಳು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಹೆಚ್ಚಿನ ಜನಸಂದಣಿ ಸೇರುವ ಸ್ಥಳಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತ ಜಾಗೃತಿ ಫಲಕಗಳನ್ನು ಅಳವಡಿಸಬೇಕು’ ಎಂದು ಅಧಿಕಾರಿಗಳಿಗೆ ಶಿಲ್ಪಾ ನಾಗ್ ನಿರ್ದೇಶನ ನೀಡಿದರು.
ನಗರಸಭೆ ಆಯುಕ್ತ ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತ, ಹಿರಿಯ ಕಾರ್ಮಿಕ ನಿರೀಕ್ಷಕಿ ವೀಣಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
'ಯಳಂದೂರಿನಿಂದ ಆರಂಭಿಸಿ’
‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಮಕ್ಕಳ ಗ್ರಾಮಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಗ್ರಾಮಸಭೆಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಾಗೃತಿ ಜೊತೆಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳು ಶಾಲೆಗಳ ಹಾಜರಾಗದಿದ್ದರೆ ಅದಕ್ಕೆ ಕಾರಣಗಳನ್ನು ಅರಿಯಲು ವಾರಕ್ಕೊಂದು ಬಾರಿ ಶಾಲೆಗೆ ಭೇಟಿ ನೀಡಿ ತಪಾಸಣೆ ನಡೆಸಿ ತಾಲ್ಲೂಕುವಾರು ವರದಿ ನೀಡಬೇಕು. ಈ ಬಗ್ಗೆ ಕಾಡಂಚಿನ ಗ್ರಾಮಗಳ ಗಿರಿಜನ ಶಾಲೆಗಳಲ್ಲಿಯೂ ತಪಾಸಣೆ ಕೈಗೊಳ್ಳುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಈಗಾಗಲೇ ತಿಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು. ‘ಜಿಲ್ಲೆಯನ್ನು ಬಾಲಕಾರ್ಮಿಕ ಪದ್ದತಿ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ತಾಲ್ಲೂಕುಗಳಲ್ಲಿ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಬಾಲಕಾರ್ಮಿಕನ್ನು ಗುರುತಿಸುವ ಕಾರ್ಯವನ್ನು ಆಂದೋಲನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ಜಾಗೃತಿ ಆಭಿಯಾನವನ್ನು ಯಳಂದೂರು ತಾಲ್ಲೂಕಿನಿಂದ ಆರಂಭಿಸಲು ಸಿದ್ದತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಶಿಲ್ಪಾ ನಾಗ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.