ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಕುಮಾರ ಅವರು ಅಧಿಕಾರಿಗಳಿಗೆ ಗುರುವಾರ ಸೂಚಿಸಿದರು.
ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿಯ ಮಯೂರ ಸಭಾಂಗಣದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ನಡೆದ ಅಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಇಬ್ಬರೂ ಮಾತನಾಡಿದರು.
‘ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿಸಂಹಿತೆ ಪಾಲನೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯದಿಂದ ಮತ್ತು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.
'ಚೆಕ್ ಪೋಸ್ಟ್‌ಗಳು 24x7 ಅವಧಿಯಲ್ಲೂ ಕಾರ್ಯನಿರ್ವಹಿಸಬೇಕು. ವ್ಯಾಪಕವಾಗಿ ವಾಹನಗಳ ತಪಾಸಣೆ ಮಾಡಬೇಕು. ಗೂಡ್ಸ್ ವಾಹನಗಳಲ್ಲಿ ಸಾಗಿಸಲಾಗುವ ಸಾಮಗ್ರಿಗಳನ್ನು ಪರಿಶೀಲಿಸಬೇಕು. ಸೂಕ್ತ ದಾಖಲೆಗಳು ಇವೆಯೇ ಎಂದು ಪರಿಶೀಲಿಸಬೇಕು. ವಾಣಿಜ್ಯ ತೆರಿಗೆ ಅಧಿಕಾರಿಗಳ ತಂಡವೂ ಪರಿಶೀಲನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
‘ದಾಖಲೆ ಇಲ್ಲದೆ ಸಾಗಿಸಲಾಗುವ ಹಣ, ಅಕ್ರಮ ಮದ್ಯ, ಆಮಿಷ ಉಡುಗೊರೆ ವಸ್ತುಗಳು ಕಂಡು ಬಂದಲ್ಲಿ ಕೂಡಲೇ ಕ್ರಮ ಜರುಗಿಸಬೇಕು. ಎರಡು ಜಿಲ್ಲೆಗಳ ಅಧಿಕಾರಿಗಳು ಮಾಹಿತಿ ವಿನಿಮಯ ಮಾಡಿಕೊಂಡು ಅಕ್ರಮಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು’ ಎಂದರು.
ಉಭಯ ಜಿಲ್ಲೆಗಳ ಗಡಿ ಭಾಗಗಳಲ್ಲಿ ವಿಶೇಷ ಕಣ್ಗಾವಲು ಇರಬೇಕು. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗೆ ಪೂರಕವಾಗುವಂತೆ ಹಾಗೂ ಲೋಪಗಳಿಗೆ ಅವಕಾಶವಾಗದಂತೆ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಶಿಲ್ಪಾ ನಾಗ್ ಮತ್ತು ಕುಮಾರ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಭಯ ಜಿಲ್ಲೆಗಳ ಅಬಕಾರಿ, ಕಂದಾಯ, ಪೊಲೀಸ್, ಸಹಾಯಕ ಚುನಾವಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.