ADVERTISEMENT

ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಜುಲೈ 10ಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಭಾಗಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:13 IST
Last Updated 7 ಜುಲೈ 2024, 16:13 IST
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಹಿಸಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿದರು
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಹಿಸಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿದರು   

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಜುಲೈ 10ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ಕೃತಜ್ಞತಾ ಸಮಾವೇಶ ಆಯೋಜನೆ ಮಾಡಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಸಚಿವರು, ಸಂಸದರು ಭಾಗವಹಿಸಲಿದ್ದಾರೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪ್ರಮುಖರ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರನ್ನು 1.88 ಲಕ್ಷ ಮತಗಳ ಅಂತರದಲ್ಲಿ ಕ್ಷೇತ್ರದ ಮತದಾರರು ಗೆಲ್ಲಿಸಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಮತದಾರರಿಗೆ ಕೃತಜ್ಞತೆ ಹಾಗೂ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 11ಗಂಟೆಗೆ ಸಮಾವೇಶ ಆರಂಭವಾಗಲಿದ್ದು ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಬೇಕು ಎಂದರು.

ಸಮಾವೇಶದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನೀಲ್ ಬೋಸ್, ಮೈಸೂರು ಹಾಗೂ ಚಾಮರಾಜ ನಗರ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ ‘ಸಮಾವೇಶದಲ್ಲಿ 8 ವಿಧಾನಸಭಾ ಕ್ಷೇತ್ರಗಳ ಮತದಾರರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದ್ದು, ಅಂಬೇಡ್ಕರ್ ಕ್ರೀಡಾಂಗಣ ಹಾಗೂ ಖಾಸಗಿ ಬಸ್ ನಿಲ್ದಾಣವನ್ನು ಸಿದ್ಧಪಡಿಸಲಾಗುತ್ತಿದೆ’ ಎಂದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಮಹದೇವ್, ಚಿಕ್ಕಮಹದೇವ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ, ಮುಖಂಡ ಎ.ಎಸ್.ಗುರುಸ್ವಾಮಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಪದ್ಮ ಪುರುಷೋತ್ತಮ್, ಶಿವಕುಮಾರ್, ಸೈಯದ್ ರಫಿ, ಎಎಚ್‌ಎನ್ ಖಾನ್, ಬಿಸಲವಾಡಿ ರವಿ, ವಡ್ಡರಹಳ್ಳಿ ಶೇಖರಪ್ಪ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.