ADVERTISEMENT

ಚಾಮರಾಜನಗರ: ಸಂಚಾರ ನಿಯಮ ಉಲ್ಲಂಘನೆ: ದಂಡದಲ್ಲಿ ಶೇ 50 ರಿಯಾಯಿತಿ

11ರಂದು ಲೋಕ ಅದಾಲತ್‌: ಸದುಪಯೋಗಕ್ಕೆ ನ್ಯಾಯಾಧೀಶರಾದ ಭಾರತಿ ಮನವಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 7:06 IST
Last Updated 4 ಫೆಬ್ರುವರಿ 2023, 7:06 IST
ಬಿ.ಎಸ್‌.ಭಾರತಿ
ಬಿ.ಎಸ್‌.ಭಾರತಿ   

ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ ಕಲ್ಪಿಸಲಾಗಿದ್ದು, ಈ ಅವಕಾಶವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಶುಕ್ರವಾರ ಇಲ್ಲಿ ತಿಳಿಸಿದರು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಮೂರ್ತಿ ವೀರಪ್ಪ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು 27ರಂದು ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಸರ್ಕಾರವು ದಂಡದ ಮೊತ್ತದಲ್ಲಿ ರಿಯಾಯಿತಿ ನೀಡಿದೆ. ಪೊಲೀಸ್ ಇಲಾಖೆಯ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿದೆ’ ಎಂದರು.

11ರಂದು ಲೋಕ ಅದಾಲತ್‌: ‘ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಫೆ.11ರಂದು ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ ನ್ಯಾಯಾಲಯಗಳಲ್ಲಿ ಬೈಠಕ್ ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಲೋಕ ಅದಾಲತ್ ನಡೆಸಲಾಗುತ್ತದೆ. ಅಂದಾಜು 11 ಸಾವಿರ ಪ್ರಕರಣಗಳು ಅದಾಲತ್‌ನಲ್ಲಿ ಇತ್ಯರ್ಥವಾಗುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.

ADVERTISEMENT

‘ಲೋಕ ಅದಾಲತ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಬಿಟ್ಟು, ಇತರೆ ಯಾವುದೇ ರೀತಿಯ ಸಿವಿಲ್ ಪ್ರಕರಣಗಳು, ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆ, ವಾಹನ ಅಪಘಾತ, ಕೈಗಾರಿಕಾ ವಿವಾದ ಕಾಯ್ದೆ ಹಾಗೂ ಇತರೆ ಎಲ್ಲ ಸ್ವರೂಪದ ಪ್ರಕರಣಗಳು ಮತ್ತು ರಾಜಿ ಯೋಗ್ಯ ಕ್ರಿಮಿನಲ್ ಪ್ರಕರಣಗಳು, ಚೆಕ್‌ ಅಮಾನ್ಯ, ಕಾರ್ಮಿಕ ಕಾಯ್ದೆಯಡಿ ಪ್ರಕರಣಗಳು, ವಿದ್ಯುತ್ ಕಳವಿಗೆ ಸಂಬಂಧಿಸಿದ ಪ್ರಕರಣಗಳು, ಕಲ್ಲು, ಮರಳು ಅಕ್ರಮ ಸಾಗಣೆಗೆ ಸಂಬಂಧಪಟ್ಟ ಅಪರಾಧಗಳು, ಇತರೆ ಯಾವುದೇ ರಾಜಿ ಯೋಗ್ಯ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜೀ ಮಾಡಿಕೊಳ್ಳಬಹುದಾಗಿದೆ ’ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.