ADVERTISEMENT

27ರಿಂದ ಕುಷ್ಠರೋಗ ಪತ್ತೆ ಅಭಿಯಾನ

ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ; ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2023, 4:57 IST
Last Updated 10 ಡಿಸೆಂಬರ್ 2023, 4:57 IST
ಸಭೆಯಲ್ಲಿ ಕುಷ್ಠರೋಗ ಪತ್ತೆ ಅಭಿಯಾನಕ್ಕೆ ಸಂಬಂಧಿಸಿದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌, ಜಿ.ಪಂ. ಸಿಇಒ ಆನಂದ್‌ ಪ್ರಕಾಶ್‌ ಮೀನಾ ಇತರರು ಬಿಡುಗಡೆ ಮಾಡಿದರು
ಸಭೆಯಲ್ಲಿ ಕುಷ್ಠರೋಗ ಪತ್ತೆ ಅಭಿಯಾನಕ್ಕೆ ಸಂಬಂಧಿಸಿದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌, ಜಿ.ಪಂ. ಸಿಇಒ ಆನಂದ್‌ ಪ್ರಕಾಶ್‌ ಮೀನಾ ಇತರರು ಬಿಡುಗಡೆ ಮಾಡಿದರು   

ಚಾಮರಾಜನಗರ: ಇದೇ 27ರಿಂದ 2024ರ ಜನವರಿ 11ರವರೆಗೆ ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. 

ಅಭಿಯಾನವನ್ನು ಯಶಸ್ವಿಗೊಳಿಸುವುದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್‌ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕುಷ್ಠರೋಗ ನಿರ್ಮೂಲನೆ ಕುರಿತ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ನಿರ್ದೇಶನ ನೀಡಿದರು.

ADVERTISEMENT

‘ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚುವ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಜನರಲ್ಲಿ ಈ ರೋಗದ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಿ, ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಭಿಯಾನ ಯಶಸ್ವಿಯಾಗುವಂತೆ ಮಾಡಬೇಕು’ ಎಂದು ಶಿಲ್ಪಾ ನಾಗ್‌ ಸೂಚಿಸಿದರು. 

‘ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಆಶಾ ಕಾರ್ಯಕರ್ತೆಯರು ಹಾಗೂ ಒಬ್ಬರು ಪುರುಷ ಸ್ವಯಂ ಸೇವಕರು ಗ್ರಾಮದ ಪ್ರತಿ ಮನೆಮನೆಗೂ ಭೇಟಿ ನೀಡಿ ಕುಷ್ಠರೋಗ ಪತ್ತೆಹಚ್ಚುವ ಬಗ್ಗೆ ಮಾಹಿತಿ ನೀಡಬೇಕು. ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಕುಷ್ಠರೋಗದ ಪ್ರಾರಂಭಿಕ ಗುಣಲಕ್ಷಣಗಳನ್ನು ಖಚಿತಪಡಿಸಿಕೊಳ್ಳಬೇಕು. ವ್ಯಕ್ತಿಯ ಚರ್ಮದಲ್ಲಿ ಯಾವುದೇ ಬಗೆಯ ಮಚ್ಚೆ ಕಂಡುಬಂದರೂ ಅಂತಹವರಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದರು.

‘ಅರಿವು ಮೂಡಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ರೋಗ ನಿರ್ಮೂಲನೆ ಕುರಿತು ಬ್ಯಾನರ್, ಭಿತ್ತಿಪತ್ರ, ಕರಪತ್ರಗಳನ್ನು ಹಂಚಬೇಕು. ಜನಜಾಗೃತಿ ಕುರಿತ ಬೀದಿನಾಟಕಗಳನ್ನು ಏರ್ಪಡಿಸಬೇಕು’ ಎಂದರು. 

‘ಕುಷ್ಠರೋಗ ತಪಾಸಣೆ ಮಾಡುವ ತಂಡಗಳ ಮೇಲ್ವಿಚಾರಣೆಯನ್ನು ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ವಹಿಸಲಿದ್ದಾರೆ. ಇದಕ್ಕಾಗಿ ಆಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರ ಪಡೆಯಬೇಕು’ ಎಂದರು. 

ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚುವ ಅಭಿಯಾನದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾಬಿಡುಗಡೆಗೊಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಚಿದಂಬರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಚಂದ್ರಶೇಖರ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೋಡೆಲ್ ಅಧಿಕಾರಿ ಡಾ.ಮಹೇಶ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ರಾಜೇಶ್‌ಕುಮಾರ್ ತಾಲ್ಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ವಿವಿಧ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಇದ್ದರು. 

‘ಅಭಿಯಾನದ ಅವಧಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಲೆಗಳಿಗೆ ಭೇಟಿ ವಿದ್ಯಾರ್ಥಿಗಳಿಗೆ ರೋಗದ ಬಗ್ಗೆ ತಿಳಿಹೇಳಬೇಕು. ಅಲ್ಲದೆ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಸೋಲಿಗರು ವಾಸಿಸುವ ಪೋಡುಗಳಲ್ಲಿನ ಜನರನ್ನು ತಪಾಸಣೆಗೊಳಪಡಿಸಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳನ್ನು ಪರೀಕ್ಷಿಸಬೇಕು’ ಎಂದು ಶಿಲ್ಪಾ ನಾಗ್ ಸೂಚಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.