ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಗೆ ನಗರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಂಗಳವಾರ ಉದ್ಘಾಟಿಸಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪುಟ್ಟರಂಗಶೆಟ್ಟಿ ಅವರು ವಿದ್ಯಾರ್ಥಿನಿಯರಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ತಿನ್ನಿಸುವ ಮೂಲಕ ಚಾಲನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಶಾಲೆಯಲ್ಲೇ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿದರು.
ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿ ‘ಶಾಲೆಗಳಲ್ಲಿ 1ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ನೀಡಲಾಗುತ್ತಿತ್ತು. ಸಿದ್ದರಾಮಯ್ಯನವರು 9ರಿಂದ 10ನೇ ತರಗತಿವರೆಗಿನ ಮಕ್ಕಳಿಗೂ ಪೂರಕ ಪೌಷ್ಟಿಕ ಆಹಾರ ವಿತರಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು’ ಎಂದರು.
‘ಆಹಾರ ಸೇವನೆಯ ಆಯ್ಕೆಯ ಹಕ್ಕು ಪ್ರತಿಯೊಬ್ಬರಿಗೂ ಇದೆ. ಮೊಟ್ಟೆ ಸೇವನೆ ಇಷ್ಟವಾಗದಿರುವವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ಕೊಡಲಾಗುತ್ತಿದೆ. ಬೆಳೆಯುವ ಮಕ್ಕಳಿಗೆ ಆರೋಗ್ಯ ದೃಷ್ಠಿಯಿಂದ ಪೌಷ್ಟಿಕ ಆಹಾರ ಸಿಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಕಾರ್ಯಕ್ರಮ ವಿಸ್ತರಣೆ ಮಾಡಿದೆ’ ಎಂದರು.
ನಗರಸಭಾ ಸದಸ್ಯ ಮಹೇಶ್ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಕವಿತಾ, ಡಿಡಿಪಿಯು ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಅಕ್ಷರ ದಾಸೋಹ ಅಧಿಕಾರಿ ಗುರುಲಿಂಗಯ್ಯ, ಡಯಟ್ ಪ್ರಾಂಶುಪಾಲ ಎಂ.ಕಾಶಿನಾಥ್, ಬಿಇಒ ಸೋಮಣ್ಣೇಗೌಡ, ಉಪ ಪ್ರಾಂಶುಪಾಲ ಎಚ್.ಎನ್. ನಂಜುಂಡಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.