ADVERTISEMENT

ಪೊಲೀಸರ ಸೇವೆ ಸದಾ ಸ್ಮರಣೀಯ

ಪೊಲೀಸ್ ಧ್ವಜ ದಿನಾಚರಣೆ: ನಿವೃತ್ತ ಅಧಿಕಾರಿಗಳು, ಸಿಬ್ಬಂದಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 3:14 IST
Last Updated 3 ಏಪ್ರಿಲ್ 2024, 3:14 IST
ಚಾಮರಾಜನಗರದಲ್ಲಿ ಮಂಗಳವಾರ ನಡೆದ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ನಿವೃತ್ತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಎಸ್‌ಪಿ ಪದ್ಮಿನಿ ಸಾಹು, ಎಎಸ್‌ಪಿ ಉದೇಶ ಇತರರು ಪಾಲ್ಗೊಂಡಿದ್ದರು
ಚಾಮರಾಜನಗರದಲ್ಲಿ ಮಂಗಳವಾರ ನಡೆದ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ನಿವೃತ್ತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಎಸ್‌ಪಿ ಪದ್ಮಿನಿ ಸಾಹು, ಎಎಸ್‌ಪಿ ಉದೇಶ ಇತರರು ಪಾಲ್ಗೊಂಡಿದ್ದರು   

ಚಾಮರಾಜನಗರ: ಕೌಟುಂಬಿಕ ಒತ್ತಡವನ್ನು ಬದಿಗಿಟ್ಟು, ಪ್ರಾಣದ ಹಂಗು ತೊರೆದು ದಿನಪೂರ್ತಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ರಕ್ಷಣೆಗೆ ಮುಂದಾಗಿರುವ ಪೊಲೀಸರ ಸೇವೆ ಸದಾ ಸ್ಮರಣೀಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಂಗಳವಾರ ಹೇಳಿದರು. 

ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪೊಲೀಸರ ಸೇವೆ ಸ್ಮರಿಸುವುದಕ್ಕೆ ಮತ್ತು ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಗೌರವಿಸುವ ಉದ್ದೇಶದಿಂದ 1965ರಿಂದಲೂ ಧ್ವಜ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.   

ADVERTISEMENT

ಪೊಲೀಸ್ ಧ್ವಜ ದಿನದ ಅಂಗವಾಗಿ ₹10, ₹20, ₹50, ₹100 ಮುಖಬೆಲೆಯ ಪೊಲೀಸ್ ಧ್ವಜಗಳನ್ನು ಅಧಿಕಾರಿಗಳು, ನಾಗರಿಕರು ಸೇರಿದಂತೆ ಎಲ್ಲರಿಗೂ ಮಾರಾಟ ಮಾಡಿ ಸಂಗ್ರಹವಾದ ಹಣದಲ್ಲಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುವ ಅಧಿಕಾರಿ, ನೌಕರರ ಆರೋಗ್ಯ ಕಲ್ಯಾಣ ಕಾರ್ಯಗಳಿಗಾಗಿ ವಿನಿಯೋಗಿಸಲಾಗುತ್ತದೆ. ಕಳೆದ ಸಾಲಿನಲ್ಲಿ ನಿವೃತ್ತ ಪೊಲೀಸರ ವೈದ್ಯಕೀಯ ಉದ್ದೇಶಗಳಿಗಾಗಿ ₹5.14 ಲಕ್ಷದಷ್ಟು ವೆಚ್ಚ ಮಾಡಲಾಗಿದೆ’ ಎಂದು ಎಸ್‌ಪಿ ತಿಳಿಸಿದರು. 

ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್‌ ಸಿ.ತಿಮ್ಮರಾಜು, ‘ಮಲೆ ಮಹದೇಶ್ವರ ನಡೆದಾಡಿದ ಪುಣ್ಯಭೂಮಿಯಲ್ಲಿ 35 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಸಂತೃಪ್ತಿ ಭಾವ ಮನೆಮಾಡಿದೆ. ಸೇವೆಯನ್ನು ಪರಿಗಣಿಸಿ 2015-16ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಸರ್ಕಾರ ನೀಡಿದೆ’ ಎಂದರು.

‘ಪೊಲೀಸರು ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಹೊಂದಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಪೊಲೀಸರಿಗೆ ಅಗತ್ಯವಾಗಿದೆ’ ಎಂದರು. 

ಗಮನಸೆಳೆದ ಪಥಸಂಚಲನ: ಪ್ರಧಾನ ದಂಡಾಧಿಕಾರಿ ಲಚ್ಚಪ್ಪ ಚೌಹಾಣ್ ಅವರ ನೇತೃತ್ವದಲ್ಲಿ ಜಿಲ್ಲಾ ಶಸಸ್ತ್ರ ಪೊಲೀಸ್ ಪಡೆ, ಸಿವಿಲ್, ಸಂಚಾರಿ, ಮಹಿಳಾ ತಂಡ, ಕೊಳ್ಳೇಗಾಲ ಉಪ ವಿಭಾಗ ತಂಡಗಳು ನಡೆಸಿದ ಪಥಸಂಚಲನ ಗಮನಸೆಳೆಯಿತು. 

ಇದೇ ವೇಳೆ ಕಳೆದ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್ ಅಧಿಕಾರಿ, ನೌಕರರನ್ನು ಸನ್ಮಾನಿಸಲಾಯಿತು. 

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿ.ವೈ.ಎಸ್.ಪಿ ಶಂಕರೇಗೌಡ, ಡಿವೈಎಸ್‌ಪಿಗಳಾದ ಲಕ್ಷ್ಮಯ್ಯ, ಧರ್ಮೇಂದ್ರ  ಇತರರು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.