ADVERTISEMENT

ಶೈಕ್ಷಣಿಕ ಪ್ರಗತಿ, ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಶಾಸಕ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2023, 7:16 IST
Last Updated 19 ನವೆಂಬರ್ 2023, 7:16 IST
ಚಾಮರಾಜನಗರದ ಸಂತ ಜೋಸೆಫರ ಶಾಲಾ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಡಿಡಿಪಿಐ ರಾಮಚಂದ್ರರಾಜೇ ಅರಸ್‌, ಬಿಇಒ ಸೋಮಣ್ಣೇಗೌಡ ಇತರರು ಇದ್ದರು
ಚಾಮರಾಜನಗರದ ಸಂತ ಜೋಸೆಫರ ಶಾಲಾ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಡಿಡಿಪಿಐ ರಾಮಚಂದ್ರರಾಜೇ ಅರಸ್‌, ಬಿಇಒ ಸೋಮಣ್ಣೇಗೌಡ ಇತರರು ಇದ್ದರು   

ಚಾಮರಾಜನಗರ: ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. 

ನಗರದ ಸಂತ ಜೋಸೆಫರ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಅವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

‘ಸರ್ಕಾರಿ ಶಾಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸುತ್ತಿವೆ. ಶಿಕ್ಷಕರು ಸಹ ಸರ್ಕಾರಿ ಶಾಲೆಯನ್ನು ಅಭಿವೃದ್ದಿ ಪಡಿಸುವುದು ಹಾಗೂ ಮಕ್ಕಳಿಗೆ ಗುಣಾತ್ಮಾಕ ಶಿಕ್ಷಣವನ್ನು ಕೊಡಿಸಲು ಶ್ರಮಿಸುತ್ತಿದ್ದಾರೆ. 26 ಕ್ಲಸ್ಟರ್ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ನಡೆದು ಈಗ ತಾಲ್ಲೂಕು ಮಟ್ಟದಲ್ಲಿ ಮಕ್ಕಳು ಭಾಗವಹಿಸಿದ್ದಾರೆ. ಮಕ್ಕಳು ಸಹ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡುವ ಜೊತೆಗೆ ಇಂತ ಕಲೆಗಳಲ್ಲಿ ಭಾಗವಹಿಸಿ, ಆಸಕ್ತಿ ವಹಿಸುವ ಮೂಲಕ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು’ ಎಂದರು. 

ADVERTISEMENT

‘ನಂಜುಂಡಪ್ಪ ವರದಿ ಅನ್ವಯ ಜಿಲ್ಲೆಯು ಅತ್ಯಂತ ಹಿಂದುಳಿದ ತಾಲ್ಲೂಕು ಆಗಿದೆ.  ಶೈಕ್ಷಣಿಕವಾಗಿ ಜಿಲ್ಲೆ ಪ್ರಗತಿ ಸಾಧಿಸುತ್ತಿದೆ. ಹಿಂದುಳಿದ ಉಪ್ಪಾರ ಸಮುದಾಯದಲ್ಲಿ ಈಗ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಶಾಲಾ ಅಭಿವೃದ್ದಿಗಾಗಿ ವಿಶೇಷ ಅನುದಾನ ಹಾಗೂ ದುರಸ್ತಿಗೆ ಹೆಚ್ಚಿನ ಕ್ರಮವಹಿಸುತ್ತೇನೆ’ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ‘ಜಿಲ್ಲೆಯು ಶಿಕ್ಷಣ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಪ್ರಗತಿ ಹೊಂದಿರುವ ಜಾನಪದರ ಜಿಲ್ಲೆಯಾಗಿದೆ. ಇಲ್ಲಿ ಕಲೆಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಉತ್ಸಾಹ ಇದೆ. ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವ ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಉತ್ಸಾಹವೇ ಕಾರಣವಾಗಿದೆ’ ಎಂದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಕಾಶೀನಾಥ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ರಾಜೀವ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಕಿರಣ್ ರಾಜ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ. ಎನ್. ಮಹದೇವಸ್ವಾಮಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ. ರಾಮಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಇತರರು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.