ADVERTISEMENT

ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ: ಡಾ.ರಾಜೇಶ್‌ ಕುಮಾರ್‌

ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 14:24 IST
Last Updated 2 ಮಾರ್ಚ್ 2024, 14:24 IST
ಪಲ್ಸ್‌ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಶನಿವಾರ ಚಾಮರಾಜನಗರದಲ್ಲಿ ಜಾಗೃತಿ ಜಾಥಾ ನಡೆಯಿತು
ಪಲ್ಸ್‌ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಶನಿವಾರ ಚಾಮರಾಜನಗರದಲ್ಲಿ ಜಾಗೃತಿ ಜಾಥಾ ನಡೆಯಿತು   

ಚಾಮರಾಜನಗರ: ಜಿಲ್ಲೆಯಾದ್ಯಂತ ಭಾನುವಾರ ನಡೆಯಲಿರುವ ಪಲ್ಸ್‌ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಶನಿವಾರ ನಗರದಲ್ಲಿ ಜಾಗೃತಿ ಜಾಥಾ ನಡೆಯಿತು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಸಂಸ್ಥೆ, ರೋಟರಿ ಸಿಲ್ಕ್ ಸಿಟಿ ಸಹಯೋಗದೊಂದಿಗೆ ಆಯೋಜಿಸಿದ್ದ ಜಾಥಾಗೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಮಲೇರಿಯಾ ನಿರ್ಮೂಲನಾ ಅಧಿಕಾರಿ ಡಾ.ರಾಜೇಶ್‌ ಕುಮಾರ್‌ ಹಸಿರು ನಿಶಾನೆ ತೋರಿದರು. 

ಅವರು ಮಾತನಾಡಿ, ‘ರಾಷ್ಟ್ರೀಯ ಲಸಿಕಾ ದಿನಾಚರಣೆ ಭಾನುವಾರ ನಡೆಯುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ತಪ್ಪದೇ ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬೇಕು’ ಎಂದರು. 

ADVERTISEMENT

‘ಪೋಲಿಯೊ ವೈರಸ್ ಅನ್ನು ತಡೆಗಟ್ಟಲು ನವಜಾತ ಶಿಶುವಿನಿಂದ ಐದು ವರ್ಷದೊಳಗಿನ ಪ್ರತಿ ಮಗುವಿಗೂ ಪಲ್ಸ್ ಪೋಲಿಯೊ ಲಸಿಕೆಯನ್ನು ನೀಡಲಾಗುತ್ತದೆ. ಈ ಲಸಿಕೆಯನ್ನು ದೇಶದೆಲ್ಲೆಡೆ ಒಂದೇ ದಿನ ಒಂದೇ ಬಾರಿಗೆ ಹಾಕುವುದರಿಂದ ಪೋಲಿಯೊ ರೋಗಾಣುವನ್ನು ನಾಶ ಮಾಡಲು ಸಹಕಾರಿಯಾಗುತ್ತದೆ’ ಎಂದರು. 

ದೇವಾಲಯದ ಮುಂಭಾಗದಿಂದ ಹೊರಟ ಜಾಥಾವು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿ ಕೊನೆಗೊಂಡಿತು.

ಆರ್‌ಸಿಎಚ್ ಅಧಿಕಾರಿ ಡಾ.ಮಂಜುನಾಥ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ರೋಟರಿ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮಾರಾಣಿ, ರೋಟರಿ ಸಂಸ್ಥೆಯ ಶ್ರೀನಿವಾಸಶೆಟ್ಟಿ, ಅಶ್ವಥ ನಾರಾಯಣ, ಅಜೀಂ ಸೇರಿದಂತೆ ಸರ್ಕಾರಿ ನರ್ಸಿಂಗ್ ಕಾಲೇಜು, ಜೆಎಸ್ಎಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಹೆಜ್ಜೆ ಹಾಕಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.