ಚಾಮರಾಜನಗರ: ಸುಳ್ವಾಡಿವಿಷ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 21ರವರೆಗೆ ಮತ್ತೆ ಮುಂದೂಡಲಾಗಿದೆ.
ಬಂಧನದ ಅವಧಿ ಮಂಗಳವಾರಕ್ಕೆ ಕೊನೆಗೊಂಡಿದ್ದರಿಂದ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿರುವ ನಾಲ್ವರು ಆರೋಪಿಗಳನ್ನು ಪೊಲೀಸರು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರ ಮುಂದೆ ಹಾಜರು ಪಡಿಸಿದರು.
ಆರೋಪಿಗಳ ಪರ ಯಾರೊಬ್ಬ ವಕೀಲರು ವಿಚಾರಣೆ ಸಂದರ್ಭದಲ್ಲಿ ಹಾಜರಿರಲಿಲ್ಲ. ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಅವರನ್ನು ಬಿಟ್ಟು ಉಳಿದ ಮೂವರು ಆರೋಪಿಗಳನ್ನು ಪ್ರಶ್ನಿಸಿದ ಜಿ.ಬಸವರಾಜ ಅವರು, ‘ನಿಮ್ಮ ಪರವಾಗಿ ವಕೀಲರನ್ನು ನೇಮಕ ಮಾಡಿಕೊಂಡಿದ್ದೀರಾ ಅಥವಾ ಸರ್ಕಾರಿ ವಕೀಲರನ್ನು ನೇಮಕ ಮಾಡಬೇಕಾ’ ಎಂದು ಕೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿಗಳಾದ ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯ ಅವರು ವಕೀಲರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದರು.
ಆ ಬಳಿಕ, ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನ ಮತ್ತು ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದರು.
ಜಾಮೀನು ಅರ್ಜಿ ತಿರಸ್ಕೃತ: ಈ ಮಧ್ಯೆ, ಇಮ್ಮಡಿ ಮಹಾದೇವಸ್ವಾಮಿ ಅವರ ಪರವಾಗಿ ಪೊನ್ನಂಪೇಟೆ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.
ಇತ್ತೀಚೆಗೆ ನಡೆದ ವಿಚಾರಣೆ ಸಂದರ್ಭದಲ್ಲಿ ಅರ್ಜಿ ತಿರಸ್ಕೃತಗೊಂಡಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಲೋಲಾಕ್ಷಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.