ಚಾಮರಾಜನಗರ: ಮತ ಎಣಿಕೆಯ ದಿನವಾದ 23ರಂದು ಜಿಲ್ಲಾ ಪೊಲೀಸ್ ಇಲಾಖೆ ಮತ ಎಣಿಕೆ ಕೇಂದ್ರದ ಸುತ್ತಮುತ್ತ ಹಾಗೂ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದೆ.
‘ಮತದಾನ ದಿನದಿಂದ ಇಲ್ಲಿಯವರೆಗೆ ಮತಯಂತ್ರಗಳನ್ನು ಇಟ್ಟಿರುವ ಎಂಜಿನಿಯರಿಂಗ್ ಕಾಲೇಜಿಗೆ ಮೂರು ಹಂತಗಳ ಭದ್ರತೆಯನ್ನು ಒದಗಿಸಲಾಗಿದೆ. ಮತ ಎಣಿಕೆಯ ದಿನವೂ ಬಿಗಿ ಬಂದೋಬಸ್ತ್‌ಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಧರ್ಮೇಂದರ್ ಕುಮಾರ್ ಮೀನಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಮತ ಎಣಿಕೆ ಕೇಂದ್ರ ಹಾಗೂ ಜಿಲ್ಲೆಯಾದ್ಯಂತ 600 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. 3 ಡಿವೈಎಸ್‌ಪಿ, 12 ಸರ್ಕಲ್ ಇನ್‌ಸ್ಪೆಕ್ಟರ್, 19 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಎಎಸ್‌ಐಗಳು, ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ’ ಎಂದರು.
‘ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 3 ತುಕಡಿಗಳು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಐದು ತುಕಡಿಗಳನ್ನು ನಿಯೋಜಿಸಲಾಗುವುದು. ಇಡೀ ಜಿಲ್ಲೆಯನ್ನು 40 ವಲಯಗಳಾಗಿ ವಿಭಾಗಿಸಲಾಗಿದೆ. ಪ್ರತಿ ವಲಯದಲ್ಲೂ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ’ ಎಂದು ಮಾಹಿತಿ ನೀಡಿದರು.
‘22 ಮತ್ತು 23ರಂದು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸೂಕ್ಷ್ಮ ಎಂದು ಗುರುತಿಸಲಾಗಿರುವ 120 ಊರುಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು. ಹನೂರು, ಕೊಳ್ಳೇಗಾಲ ಸೇರಿದಂತೆ ವಿವಿಧ ಪಟ್ಟಣಗಳಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 7 ತಂಡಗಳು ಕರ್ತವ್ಯ ನಿರ್ವಹಿಸಲಿವೆ’ ಎಂದು ಅವರು ಹೇಳಿದರು.
ಸಹಕಾರ ಕೊಡಿ: ‘ಚುನಾವಣಾ ಆಯೋಗದ ನಿರ್ದೇಶನಗಳನ್ನು ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಹಾಗಾಗಿ, ಮತ ಎಣಿಕೆಯ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಕಾರ್ಯಕರ್ತರು ಮತ್ತು ಜನಸಾಮಾನ್ಯರು ನಮಗೆ ಸಹಕಾರ ಕೊಡಬೇಕು’ ಎಂದು ಅವರು ಮನವಿ ಮಾಡಿದರು.
‘ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕೊಂಡೊಯ್ಯಲು ಅವಕಾಶ ಇಲ್ಲ. ಗುರುತಿಚಿನ ಚೀಟಿ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.