ADVERTISEMENT

ಚಾಮರಾಜನಗರ: ವಾಲ್ಮೀಕಿ, ಭಗೀರಥ, ಕನಕದಾಸರ ಪುತ್ಥಳಿ ನಿರ್ಮಾಣ

ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 15:25 IST
Last Updated 17 ಅಕ್ಟೋಬರ್ 2024, 15:25 IST
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿದರು
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿದರು   

ಚಾಮರಾಜನಗರ: ‌ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ವಾಲ್ಮೀಕಿ ಪುತ್ಥಳಿಯ ಜೊತೆಗೆ ಭಗೀರಥ ಮಹರ್ಷಿ ಹಾಗೂ ಕನಕದಾಸರ ಪುತ್ಥಳಿ ನಿರ್ಮಾಣಕ್ಕೂ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಮೂವರು ಮಹನೀಯರ ಪುತ್ಥಳಿ ನಿರ್ಮಾಣಕ್ಕೆ ತಗುಲುವ ವೆಚ್ಚದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಶೀಘ್ರ ಮಹನೀಯರ ಪುತ್ಥಳಿ ನಿರ್ಮಾಣವಾಗಲಿದೆ ಎಂದು ಸಚಿವರು ತಿಳಿಸಿದರು.

ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಟೀಕೆ ಟಿಪ್ಪಣಿಗಳಿಗೆ ಅವಕಾಶಕೊಡದೆ ಕ್ರಮಬದ್ಧವಾಗಿ ಪುತ್ಥಳಿ ನಿರ್ಮಾಣವಾಗಬೇಕು ಎಂಬುದಷ್ಟೆ ಆಶಯವಾಗಿದೆ. ಸೂಕ್ಷ್ಮ ವಿಚಾರಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.

ADVERTISEMENT

ನಾಯಕ ಸಮುದಾಯದ ಮುಖಂಡರಿಗೆ ವಾಸ್ತವ ಅರಿವಾಗುತ್ತಿಲ್ಲ. ಜಿಲ್ಲಾಡಳಿತ ಮುಂಭಾಗ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಪಟ್ಟುಹಿಡಿದಿದ್ದಾರೆ. ಸರ್ಕಾರದಿಂದ ಅನುಮತಿ ಸಿಗದೆ ಭೂಮಿ ಪೂಜೆ ನೆರವೇರಿಸುವುದು ಸರಿಯಲ್ಲ. ಮುಖ್ಯಮಂತ್ರಿ ಜೊತೆ ಮಾತನಾಡಿ ಮಂಜೂರಾತಿ ಪಡೆದ ಬಳಿಕ ಮಾಡುವುದಾಗಿ ಮನವೊಲಿಸಿದರೂ ಒಪ್ಪಲಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಉತ್ಕೃಷ್ಟ ನೈತಿಕ ಮೌಲ್ಯಗಳಿಂದ ಕೂಡಿದ್ದು ರಾಮರಾಜ್ಯ ನಿರ್ಮಾಣಕ್ಕೆ ಪೂರಕವಾಗಿದೆ. ರಾಮಾಯಣದಲ್ಲಿ ಬರುವ ಪಾತ್ರಗಳು ಪ್ರತಿಯೊಬ್ಬರ ಜೀವನದಲ್ಲೂ ಪ್ರಭಾವ ಬೀರುವ ಶಕ್ತಿ ಹೊಂದಿವೆ. ರಾಮಾಯಣ ಮಹಾಕಾವ್ಯ ಪ್ರಪಂಚದ ಎಲ್ಲ ಭಾಷೆಗಳಲ್ಲೂ ರಚನೆಯಾಗಿರುವುದು ಅದರ ಮಹತ್ವವನ್ನು ತೋರಿಸುತ್ತದೆ ಎಂದರು.

ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಬಂಗಾರ ಬದುಕಲ್ಲ. ಬದುಕು ಬಂಗಾರದತಿರಬೇಕು. ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹರ್ಷಿಗೆ ಸಂಸ್ಕಾರಪೂರ್ಣ ಗೌರವ ನೀಡಬೇಕಾಗಿದೆ. ಸಂತರು, ದಾರ್ಶನಿಕರು ಜಗತ್ತನ್ನು ಉತ್ತಮ ದಿಕ್ಕಿನತ್ತ ಕೊಂಡೊಯ್ದಿದ್ದು ಅಂತಹ ಮಹಾಪುರುಷರಲ್ಲಿ ವಾಲ್ಮೀಕಿ ಸಹ ಒಬ್ಬರಾಗಿದ್ದಾರೆ ಎಂದರು.

ನಿವೃತ್ತ ಪ್ರಾಂಶುಪಾಲ ಬಂಗಾರ ನಾಯಕ ಮಾತನಾಡಿ, ಮಹರ್ಷಿ ವಾಲ್ಮೀಕಿ ಜಗತ್ತಿಗೆ ರಾಮಾಯಣ ಎಂಬ ಮಹಾಕಾವ್ಯವನ್ನು ಕೊಡುಗೆಯಾಗಿ ನೀಡಿದ್ದಾರೆ. ರಾಮಾಯಣದ ಮೂಲವೇ ಮನುಷ್ಯನ ನೈತಿಕತೆಯಾಗಿದೆ. ಇಂದಿನ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ವಾಲ್ಮೀಕಿ ಅವರ ಆದರ್ಶಗಳು ಮಾದರಿ ಹಾಗೂ ಅನುಕರಣೀಯ. ರಾಮಾಯಣವನ್ನು ಅಧ್ಯಯನ ಮಾಡುವ ಮೂಲಕ ವಾಸ್ತವ ಅರಿಯಬೇಕು ಎಂದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಪಡೆದ ಪರಿಶಿಷ್ಟ ಪಂಗಡಗಳ ಸಮುದಾಯದ ವಿದ್ಯಾರ್ಥಿನಿ ಆರ್.ಚೇತನಾಗೆ ಒಂದು ಲಕ್ಷ ಪ್ರೋತ್ಸಾಹ ಧನ ವಿತರಿಸಿ ಸನ್ಮಾನಿಸಲಾಯಿತು.

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಎಸ್‌ಪಿ ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್, ಬಿಂದ್ಯಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾಲಾರ್ಪಣೆ ಮಾಡಿದರು.

ವಾಲ್ಮೀಕಿ ಆದರ್ಶಗಳು ಸಮಾಜಕ್ಕೆ ಪ್ರೇರಕ ಜಗತ್ತಿಗೆ ಮಹಾಕಾವ್ಯ ನೀಡಿದ ಮಹರ್ಷಿ ವಾಲ್ಮೀಕಿ ಶೀಘ್ರ ವಾಲ್ಮೀಕಿ ಪುತ್ಥಳಿ ನಿರ್ಮಾಣ: ಸಚಿವರ ಭರವಸೆ

‘ಕಿರಿಕಿರಿಗೆ ಕ್ಷಮೆ ಕೋರುತ್ತೇನೆ’

ಸಮಾಜದ ಮುಖಂಡರು ನಾಯಕರು ರಾಜಕಾರಣಿಗಳು ಪ್ರಬುದ್ಧರಾಗಿ ನಡೆದುಕೊಳ್ಳಬೇಕು. ಇತರ ಸಮಾಜಗಳು ನಮ್ಮನ್ನು ನೋಡುತ್ತವೆ ಎಂಬ ಎಚ್ಚರಿಕೆ ಇರಬೇಕು. ವಾಲ್ಮೀಕಿ ಪುತ್ಥಳಿ ನಿರ್ಮಾಣ ವಿಚಾರದಲ್ಲಿ ಸಚಿವರು ಶಾಸಕರು ಜಿಲ್ಲಾಡಳಿತಕ್ಕೆ ಮಾನಸಿಕವಾಗಿ ಕಿರಿಕಿರಿಯಾಗಿದ್ದರೆ ಕ್ಷಮೆ ಕೋರುತ್ತೇನೆ. ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದಲೇ ವಾಲ್ಮೀಕಿ ಪುತ್ಥಳಿ ಸ್ಥಾಫನೆಗೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.