ಚಿಕ್ಕಬಳ್ಳಾಪುರ: ಜಿಲ್ಲೆಯ ಐದು ಗ್ರಾಮ ಪಂಚಾಯಿತಿಗಳು 2017–18ನೇ ಸಾಲಿನ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಆಯ್ಕೆಯಾಗಿವೆ. ಅಕ್ಟೋಬರ್ 2 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಗಳು ಪ್ರದಾನವಾಗಲಿವೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ, ಬಾಗೇಪಲ್ಲಿ ತಾಲ್ಲೂಕಿನ ಚಾಕವೇಲು, ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ, ಶಿಡ್ಲಘಟ್ಟ ತಾಲ್ಲೂಕಿನ ಆನೂರು, ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಮತ್ತು ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮ ಪಂಚಾಯಿತಿ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಭಾಜನವಾಗಿವೆ. ಕೋನಪಲ್ಲಿ ಗ್ರಾಮ ಪಂಚಾಯಿತಿ ಸತತವಾಗಿ ಎರಡನೇ ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಉತ್ತಮ ಅನುಷ್ಠಾನ, ಅಭಿವೃದ್ಧಿ ಕಾಮಗಾರಿಗಳ ಅನುದಾನ ಸಮರ್ಪಕ ಬಳಕೆ, ಸೌರಶಕ್ತಿ ವಿದ್ಯುತ್ ಬಳಕೆ, ಪಂಚಾಯಿತಿ ವ್ಯಾಪ್ತಿಯಲ್ಲಿ ನೈರ್ಮಲ್ಯ ನಿರ್ವಹಣೆ ಇತ್ಯಾದಿ ಮಾನದಂಡಗಳನ್ನು ಆಧರಿಸಿ ಈ ಪ್ರಶಸ್ತಿಗಳಿಗೆ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪುರಸ್ಕಾರಕ್ಕೆ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಪ್ರಶಸ್ತಿ ಪತ್ರ, ₨5 ಲಕ್ಷ ನಗದು ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.