ADVERTISEMENT

ಪಕ್ಷ ಸಂಘಟನೆಗೆ ಒತ್ತು ನೀಡಿ

ಬಿಜೆಪಿ ಯುವ ಮೋರ್ಚಾ ಜಿಲ್ಲಾಮಟ್ಟದ ಕಾರ್ಯಕಾರಣಿ ಸಭೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2018, 5:19 IST
Last Updated 8 ಅಕ್ಟೋಬರ್ 2018, 5:19 IST
ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭರತ್ ರೆಡ್ಡಿ ಮಾತನಾಡಿದರು.
ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭರತ್ ರೆಡ್ಡಿ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸದೃಢವಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದವರನ್ನು, ಪಕ್ಷ ತೊರೆದವರನ್ನು ಪಕ್ಷಕ್ಕೆ ಆಹ್ವಾನಿಸಿ ಬೇರುಮಟ್ಟದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಬೇಕು’ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭರತ್ ರೆಡ್ಡಿ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ಜಿಲ್ಲಾಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.

‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವ ದಿಸೆಯಲ್ಲಿ ಈಗಾಗಲೇ ಮೋರ್ಚಾ ಅನೇಕ ಸಭೆಗಳನ್ನು ನಡೆಸಿದೆ. ಇದೇ ತಿಂಗಳು 27, 28 ರಂದು ಹೈದರಾಬಾದ್‌ನಲ್ಲಿ ನಡೆಯುವ ರಾಷ್ಟ್ರೀಯ ವಿಶೇಷ ಅಧಿವೇಶನದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಕಳೆದ ನಾಲ್ಕೂವರೆ ವರ್ಷದ ಆಡಳಿತದಲ್ಲಿ ಇಡೀ ವಿಶ್ವಕ್ಕೆ ಭಾರತ ಮಾದರಿ ಎನ್ನುವುದನ್ನು ಪರಿಚಯಿಸಿದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಅವರ ಕೈಯನ್ನು ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಲಪಡಿಸಬೇಕಿದೆ. ದೇಶದ ಅಳಿವು ಉಳಿವಿನ ಪ್ರಶ್ನೆಯಂತಾಗಿರುವ ಮುಂಬರುವ ಚುನಾವಣೆಯ ಎಲ್ಲ ಸ್ಥಾನಗಳಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಪಣ ತೋಡುವಂತೆ ಕಾರ್ಯಕರ್ತರು ಸಜ್ಜಾಗಬೇಕು’ ಎಂದರು.

ಮೋರ್ಚಾದ ಜಿಲ್ಲಾ ಘಟಕದ ಕಾರ್ಯದರ್ಶಿ ಸಿ.ಬಿ.ಕಿರಣ್ ಮಾತನಾಡಿ, ‘ಪಕ್ಷದ ಸಂಘಟನೆಯೊಂದಿಗೆ ಸ್ವಚ್ಛತಾ ಕಾರ್ಯ ನಡೆಸಲು ನಿರ್ಧರಿಸಿರುವ ಯುವ ಮೋರ್ಚಾ ಜಿಲ್ಲೆಯಲ್ಲಿರುವ ಪುರಾತನ ದೇವಾಲಯಗಳ ಹಾಗೂ ಕಲ್ಯಾಣಿಗಳ ಸ್ವಚ್ಛತೆ ಕಾರ್ಯ ನಡೆಸಲು ನಿರ್ಧರಿಸಿದೆ. ಮುಂಬರುವ ದಿನಗಳಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಗುಮ್ಮನಾಯಕನ ಪಾಳ್ಯದ ಕೋಟೆಯಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು. ಮೋರ್ಚಾದ ಪದಾಧಿಕಾರಿಗಳಾದ ಬಾಲು, ಮಧುಚಂದ್ರ, ನರೇಶ್, ನವೀನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT