ADVERTISEMENT

ಮತ ಎಣಿಕೆ ಕಾರ್ಯ ಕಟ್ಟುನಿಟ್ಟಾಗಿ ನಡೆಸಿ

ಪೂರ್ವಸಿದ್ಧತೆ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 2:41 IST
Last Updated 8 ಡಿಸೆಂಬರ್ 2019, 2:41 IST
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಪಾರದರ್ಶಕವಾಗಿ, ಕಟ್ಟುನಿಟ್ಟಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮತ ಎಣಿಕೆ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ‘ನಗರದ ಬಿ.ಬಿ. ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಸೆಂಬರ್ 9 ರಂದು ಬೆಳಿಗ್ಗೆ 8ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಿಗ್ಗೆ 6ರ ಒಳಗೆ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಬೇಕು. ಕಡ್ಡಾಯವಾಗಿ ಪ್ರತಿಯೊಬ್ಬರೂ ಗುರುತಿನ ಪತ್ರ ಧರಿಸಿರಬೇಕು. 10 ಟೇಬಲ್‌ಗಳಲ್ಲಿ 26 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ’ ಎಂದು ಹೇಳಿದರು.

‘ಮತ ಎಣಿಕೆ ಕೇಂದ್ರದ ಒಳಗೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಅಭ್ಯರ್ಥಿಗಳು ಎಣಿಕೆ ಮೇಲ್ವಿಚಾರಕರು ಮೊಬೈಲ್ ಫೋನ್‌ಗಳನ್ನು ತರುವುದು, ಬಳಕೆ ಮಾಡುವುದು ನಿಷೇಧಿಸಲಾಗಿದೆ. ಯಾರೂ ಮೊಬೈಲ್ ತರಕೂಡದು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಚುನಾವಣಾಧಿಕಾರಿ ಎ.ಎನ್. ರಘುನಂದನ್, ಡಿವೈಎಸ್ಪಿ ರವಿಶಂಕರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೋಮೇಶ್‌ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.