ADVERTISEMENT

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಇನ್ನೂ ಕ್ಷೇತ್ರಕ್ಕೆ ಬಾರದ ಕಾಂಗ್ರೆಸ್ ವೀಕ್ಷಕ

ಡಿ.ಎಂ.ಕುರ್ಕೆ ಪ್ರಶಾಂತ
Published 21 ನವೆಂಬರ್ 2023, 5:02 IST
Last Updated 21 ನವೆಂಬರ್ 2023, 5:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಹುರುಪಿನಿಂದ ಮುನ್ನಡೆದಿದೆ. 2024ರ ಲೋಕಸಭೆ ಚುನಾವಣೆಯ ಸಿದ್ಧತೆಗಳನ್ನು ಆರಂಭಿಸಿದೆ.

ಟಿಕೆಟ್ ಆಕಾಂಕ್ಷಿಗಳ ದೊಡ್ಡ ಸಾಲು ಇದೆ. ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಮುಖಂಡರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು ಸಚಿವರ ನೇತೃತ್ವದ ವೀಕ್ಷಕರ ತಂಡವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿದೆ. ಆದರೆ, ಇಲ್ಲಿಯವರೆಗೆ ಅಭಿಪ್ರಾಯ ಸಂಗ್ರಹಕ್ಕೆ ಜಿಲ್ಲೆಗೆ ಇಂದಿಗೂ ವೀಕ್ಷಕರು ಭೇಟಿ ನೀಡಿಲ್ಲ.

ADVERTISEMENT

ಸೆಪ್ಟೆಂಬರ್‌ನಲ್ಲಿ ಈ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ನೇಮಿಸಲಾಗಿದೆ. ಜಮೀರ್ ನೇತೃತ್ವದ ತಂಡವು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ನಡೆಸಬೇಕು.

ವೀಕ್ಷಕರು ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಎಲ್ಲ ಹಂತದ ಮುಖಂಡರನ್ನು ಸಂಪರ್ಕಿಸಿ ಸಭೆಗಳನ್ನು ಆಯೋಜಿಸಬೇಕು. ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೀಕ್ಷಕರ ನೇಮಕದ ವೇಳೆ ಸೂಚಿಸಿದ್ದರು. 

ಜಮೀರ್ ಅವರ ನೇಮಕವಾಗಿ ಎರಡು ತಿಂಗಳಾಗಿದೆ. ಆದರೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಮ್ಮೆಯೂ ಅವರು ಕ್ಷೇತ್ರಕ್ಕೆ ಕಾಲಿಟ್ಟಿಲ್ಲ. ಒಂದು ಸಭೆಯನ್ನೂ ಮಾಡಿಲ್ಲ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ವೀಕ್ಷಕರ ತಂಡಗಳು ಭೇಟಿ ನೀಡಿ, ಅಭಿಪ್ರಾಯ ಸಂಗ್ರಹಿಸಿವೆ.   

ದೊಡ್ಡದಿದೆ ಆಕಾಂಕ್ಷಿಗಳ ಸಂಖ್ಯೆ: ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ, ‘ನಾನು ಟಿಕೆಟ್ ಆಕಾಂಕ್ಷಿಯಲ್ಲ. ಆದರೆ ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸುವೆ ಎಂದು ಹೇಳುತ್ತಿದ್ದಾರೆ. ಆದರೆ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪರಿಶಿಷ್ಟ ಜಾತಿ, ಯುವ ಘಟಕ ಸೇರಿದಂತೆ ವಿವಿಧ ಘಟಕಗಳ ಸಭೆ ನಡೆಸಿದ್ದಾರೆ. 

ಮತ್ತೊಂದು ಕಡೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೆಸರು ಸಹ ಟಿಕೆಟ್ ವಿಚಾರದಲ್ಲಿ ಮುಂಚೂಣಿಯಲ್ಲಿ ಇದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ಸಹ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ಮುಖಂಡ ಸಿ.ಎಸ್.ದ್ವಾರಕಾನಾಥ್ ಅವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಆಕಾಂಕ್ಷಿಗಳು ಈಗಾಗಲೇ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿ ಮುಖಂಡರು, ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ವೀಕ್ಷಕರು ಕ್ಷೇತ್ರಕ್ಕೆ ಬಂದರೆ ಅವರ ಮುಂದೆ ಕಾರ್ಯಕರ್ತರು ಮತ್ತು ಮುಖಂಡರು ಸಹ ತಮ್ಮ ಅಭಿಪ್ರಾಯಗಳನ್ನು ಹೇಳಬಹುದು. ಆಕಾಂಕ್ಷಿಗಳು ಸಹ ತಮ್ಮ ಸಾಮರ್ಥ್ಯ, ಸಂಘಟನೆ ಮತ್ತಿತರ ವಿಷಯಗಳನ್ನು ಹಂಚಿಕೊಳ್ಳಬಹುದು. ಆದರೆ ಜಮೀರ್ ಅಹಮದ್ ಅವರು ಅಭಿಪ್ರಾಯ ಸಂಗ್ರಹಿಸಲು ಕ್ಷೇತ್ರದತ್ತ ಸುಳಿದಿಲ್ಲ.

ಟಿಕೆಟ್ ಆಕಾಂಕ್ಷಿಗಳು ಪ್ರಭಾವಿಗಳಾಗಿರುವ ಕಾರಣ ವೀಕ್ಷಕರ ನೇಮಕ ಬರಿ ನಾಮಕಾವಸ್ತೆಗೆ ಮಾತ್ರವೇ ಎನ್ನುವ ಮಾತು ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

‘ಶೀಘ್ರದಲ್ಲಿಯೇ ಕ್ಷೇತ್ರಕ್ಕೆ ಭೇಟಿ’ 

ಇತ್ತೀಚೆಗೆ ಜಮೀರ್ ಅಹಮ್ಮದ್ ಅವರನ್ನು ಭೇಟಿ ಮಾಡಿದ್ದೇವೆ. ಅವರು ಪ್ರಸಿದ್ಧ ಧಾರ್ಮಿಕ ಸ್ಥಳ ಮುರುಗಮಲ್ಲಕ್ಕೆ ಭೇಟಿ ನೀಡುವೆ. ಅಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಬಂದು ಮುಖಂಡರ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಕೋನಪ್ಪಲಿ ಕೋದಂಡ ‘ಪ್ರಜಾವಾಣಿ’ಗೆ ತಿಳಿಸಿದರು. ತೆಲಂಗಾಣ ಚುನಾವಣೆ ನಡೆಯುತ್ತಿರುವ ಕಾರಣ ಅವರು ಅಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಅಲ್ಲಿನ ಚುನಾವಣೆ ಪ್ರಚಾರ ಪೂರ್ಣವಾದ ತರುವಾಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಮುಖಂಡರ ಅಭಿಪ್ರಾಯವನ್ನು ಆಲಿಸುವರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.