ADVERTISEMENT

ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ: ಆರ್.ವಿಶಾಲ್

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 14:32 IST
Last Updated 29 ಜನವರಿ 2020, 14:32 IST
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಆರ್.ವಿಶಾಲ್ ಮಾತನಾಡಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಆರ್.ವಿಶಾಲ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಪರಿಸರ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ತ್ಯಾಜ್ಯ ವಿಂಗಡಣೆ ಮತ್ತು ವಿಲೇವಾರಿ ಕಾರ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಮರ್ಪಕವಾಗಿ ಮಾಡಬೇಕು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಆರ್.ವಿಶಾಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಮ್ಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಪರಿಸರ ಸಂರಕ್ಷಣೆ ಹಾಗೂ ಜನಸಾಮಾನ್ಯರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯವನ್ನು ವಿಂಗಡಿಸಿ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಭಾಗದ ಜನರಿಗೆ ಹೆಚ್ಚು ಅರಿವು ಮೂಡಿಸಬೇಕು. ಅಲ್ಲದೆ, ವೈದ್ಯಕೀಯ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಲ್ಲಿ ಅಧಿಕಾರಿಗಳು ಬಹಳ ಎಚ್ಚರಿಕೆ ವಹಿಸಬೇಕು. ಸ್ವಚ್ಛ ಭಾರತ್ ಮಿಷನ್ ಅಡಿ ಯೋಜನೆಗಳ ಬಗ್ಗೆ ಜನರಿಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು’ ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ, ‘ಜಿಲ್ಲೆಯಲ್ಲಿರುವ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಸಂರಕ್ಷಿಸಲಾಗುತ್ತಿದೆ. ಶಾಲಾ, ಕಾಲೇಜು, ಸರ್ಕಾರಿ ಕಟ್ಟಡಗಳು, ಅಂಗನವಾಡಿ ಕೇಂದ್ರಗಳು, ಮನೆಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳಲು ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಅಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ರಥಯಾತ್ರೆ ಕೈಗೊಂಡು ಅರಿವು ಮೂಡಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ 64 ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಸೇರಿದಂತೆ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.