ADVERTISEMENT

ಡಿ.10 ರಿಂದ ಅನಿರ್ದಿಷ್ಟ ಮುಷ್ಕರ

ಬೇಡಿಕೆ ಈಡೇರಿಸುವಂತೆ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 14:43 IST
Last Updated 1 ಡಿಸೆಂಬರ್ 2019, 14:43 IST

ಚಿಕ್ಕಬಳ್ಳಾಪುರ: ‘ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂಬುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 10 ರಿಂದ ರಾಜ್ಯದಾದ್ಯಂತ ಅಂಗನವಾಡಿ ನೌಕರರ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಎಂ.ಲಕ್ಷ್ಮಿದೇವಮ್ಮ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಂಗನವಾಡಿಗೆ ವರ್ಗಾಯಿಸಬೇಕು. ಇಲ್ಲದಿದ್ದರೆ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿದು ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚಿದರೂ ಅಚ್ಚರಿ ಇಲ್ಲ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಗೊಂಡರೆ ಅಂಗನವಾಡಿಗಳ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿವೆ. ಇದರಿಂದ ಅಂಗನವಾಡಿ ನೌಕರರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಲಿದೆ’ ಎಂದು ಹೇಳಿದರು.

‘ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ ಮೂರು ಗಂಟೆ ಶಾಲಾ ಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಾತೃಪೂರ್ಣ ಯೋಜನೆ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯರನ್ನು ಕೊಡಬೇಕು. ಐಸಿಡಿಎಸ್‌ನ ಆರು ಉದ್ದೇಶಗಳಿಗೆ ಬಿಟ್ಟು ಅಂಗನವಾಡಿ ನೌಕರರಿಂದ ಬೇರೆ ಕೆಲಸಗಳನ್ನು ಮಾಡಿಸಬಾರದು. ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯದಾದ್ಯಂತ ಆರು ರಾಜ್ಯ ಮಟ್ಟದ ಅಂಗನವಾಡಿ ನೌಕರರ ಜಾಥಾಗಳನ್ನು ನಡೆಸಲಾಗುತ್ತಿದೆ’ ಎಂದರು.

ADVERTISEMENT

‘ಡಿ.4 ರಂದು ರಾಜ್ಯ ಮಟ್ಟದ ಜಾಥವೊಂದು ಕೋಲಾರದಿಂದ ಬಾಗೇಪಲ್ಲಿಯ ಗೂಳೂರಿಗೆ ತಲುಪಲಿದೆ. ಬಳಿಕ ಸಮಾವೇಶ ನಡೆಸಿ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನ ಸೆಳೆಯಲಾಗುವುದು’ ಎಂದು ಹೇಳಿದರು.

ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ವೆಂಕಟಲಕ್ಷ್ಮಮ್ಮ , ಸಂಘದ ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷೆ ಸುಜಾತಾ, ಕಾರ್ಯದರ್ಶಿ ಮುನಿರತ್ನಾ, ಗೌರಿಬಿದನೂರು ತಾಲ್ಲೂಕು ಘಟಕದ ಅಧ್ಯಕ್ಷೆ ಪದ್ಮಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.