ADVERTISEMENT

ಚಿಕ್ಕಬಳ್ಳಾಪುರ | 'ಜಾತಿ ಜನಗಣತಿ ವರದಿ ಜಾರಿಗೆ ಒತ್ತಾಯ'

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 13:09 IST
Last Updated 19 ಅಕ್ಟೋಬರ್ 2024, 13:09 IST
ಚಿಕ್ಕಬಳ್ಳಾಪುರದಲ್ಲಿ ಕುರುಬರ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು
ಚಿಕ್ಕಬಳ್ಳಾಪುರದಲ್ಲಿ ಕುರುಬರ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು   

ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಕುರುಬರ ಸಂಘ ಚಿಕ್ಕಬಳ್ಳಾಪುರ ತಾಲ್ಲೂಕು ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶ ಮತ್ತು ವಿದ್ಯಾಭ್ಯಾಸದ ಅವಕಾಶ ಲಭಿಸಿಲ್ಲ. ಅಹಿಂದ ವರ್ಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆ ಕಾರಣಕ್ಕಾಗಿ ಅವಕಾಶ ಸಿಕ್ಕಿಲ್ಲ. ಜೊತೆಗೆ ನಿರ್ದಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮ ರೂಪಿಸಬಹುದು. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು.

ADVERTISEMENT

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ ಅಕ್ಟೋಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ ಆಯೋಜಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕುರುಬರ ಸಂಘ ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಎಂ.ಆನಂದ್, ಗೌರವ ಅಧ್ಯಕ್ಷ ರಾಮಕೃಷ್ಣಪ್ಪ, ಖಜಾಂಚಿ ಎಂ.ಲಕ್ಷ್ಮಯ್ಯ, ಕಾರ್ಯದರ್ಶಿ ಎನ್ ಸುರೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಸಿ.ಪ್ರಕಾಶ್, ವೆಂಕಟರಮಣಪ್ಪ, ಮಂಜುನಾಥ್, ರಾಮಾಂಜಿನಪ್ಪ, ಶ್ರೀನಿವಾಸ್, ನರೇಂದ್ರ, ಶಿವಕುಮಾರ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.