ಶಿಡ್ಲಘಟ್ಟ : ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ “ವಿಶ್ವ ಪರಿಸರ ದಿನಾಚರಣೆ ಹಾಗೂ ಪರಿಸರ ಜಾಗೃತಿ ಅಭಿಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಆದರ್ಶ್ ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಸಹಾಯಕ ಪ್ರಾಧ್ಯಾಪಕ ಎಂ. ಮಂಜುನಾಥ್ ಮಾತನಾಡಿ, ಪರಿಸರ ದಿನ ಕೇವಲ ಆಚರಣೆಗಷ್ಟೇ ಸೀಮಿತವಾಗಬಾರದು, ಪರಿಸರ ಸಂರಕ್ಷಣೆ ನಿತ್ಯಬದುಕಿನ ಕಾಯಕವಾಗಬೇಕು. ಇಲ್ಲದೇ ಹೋದರೆ ಜೀವ ಸಂಕುಲ ಸರ್ವನಾಶವಾಗುತ್ತದೆಂದು ಹೇಳಿದರು.
ಉಪನ್ಯಾಸಕಿ ವೈ.ಎನ್. ಮಂಜುಳಮ್ಮ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಪ್ರಾರಂಭವಾದ ಹಿನ್ನೆಲೆಯನ್ನು ಅರ್ಥಪೂರ್ಣವಾಗಿ ತಿಳಿಸಿಕೊಟ್ಟು, ಪರಿಸರ ಸಂರಕ್ಷಣೆ ಕೇವಲ ಸರ್ಕಾರಗಳು, ಸಂಘ ಸಂಸ್ಥೆಗಳು, ಪರಿಸರವಾದಿಗಳ ಜವಾಬ್ದಾರಿ ಮಾತ್ರವಲ್ಲ. ಭೂಮಿಯ ಮೇಲಿನ ಪ್ರತಿಯೊಬ್ಬ ಮಾನವ ಕರ್ತವ್ಯ ಮತ್ತು ಜವಾಬ್ದಾರಿ ಎಂದು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಕೆ. ಸುರೇಶ್ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಪರಿಸರದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಕಾಲೇಜಿನ ಆವರಣದಲ್ಲಿ ಮತ್ತು ಮಳ್ಳೂರಿನ ಸರ್ಕಾರಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವಂತೆ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.
ವಿದ್ಯಾರ್ಥಿಗಳು ಪರಿಸರ ಸಂಕ್ಷಣೆಯ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಮಳ್ಳೂರು ಮತ್ತು ಕಾಚಹಳ್ಳಿ ಗ್ರಾಮಗಳ ಪ್ರಮುಖ ರಸ್ತೆಗಳಲ್ಲಿ ಅಭಿಯಾನ ನಡೆಸಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು.
ವಿದ್ಯಾರ್ಥಿಗಳಾದ ಎಂ.ಸಿಂಧು, ಸಿ.ಪಲ್ಲವಿ, ಬಿ.ಎನ್ ಲಾವಣ್ಯ, ಕೆ.ಕುಶಲ್ ಗೌಡ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಉಪನ್ಯಾಸಕರಾದ ಎ.ಪ್ರಸನ್ನ ಕುಮಾರ್. ವಿ.ಸವಿತ. ರೇಷ್ಮಾ. ದೀಬಾಕೌಸರ್, ಅನುಶ್ರೀ, ಅಶೋಕ್ ಕುಮಾರ್, ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.