ADVERTISEMENT

ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ

ಸಭೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 13:41 IST
Last Updated 3 ಅಕ್ಟೋಬರ್ 2024, 13:41 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿದರು
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿದರು   

ಶಿಡ್ಲಘಟ್ಟ: ಮಹರ್ಷಿ ವಾಲ್ಮೀಕಿ ಜಯಂತಿ ಯಾವುದೋ ಒಂದು ವರ್ಗ ಅಥವಾ ಪಕ್ಷಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿ ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರಲಿದೆ ಎಂದರು.

ADVERTISEMENT

ಸಮುದಾಯದ ಹಿರಿಯ ಮುಖಂಡ, ಜಿ.ಪಂ ಮಾಜಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಸ್ತ್ರೀ-ಪುರುಷ ಸರಿಸಮಾನತೆಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿ ಬೋಧಿಸಿದ್ದು ಪ್ರತಿಯೊಬ್ಬರೂ ಅವರ ಆದರ್ಶ  ಮೈಗೂಡಿಸಿಕೊಳ್ಳಬೇಕು. ಇದೇ ಅಕ್ಟೋಬರ್ 17ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಎಂದರು.

ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಬೆಳಿಗ್ಗೆ 8ಕ್ಕೆ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿರುವ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಗಣ್ಯರಿಂದ ಪೂಜೆ ಸಲ್ಲಿಸಲಾಗುತ್ತದೆ. ನಂತರ ನಗರದ ಮಯೂರ ವೃತ್ತದಲ್ಲಿರುವ ವಾಲ್ಮೀಕಿ ದೇವಾಲಯದಿಂದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ಸಮುದಾಯದ ಹಿರಿಯ ಮುಖಂಡ ಎನ್.ಮುನಿಯಪ್ಪ, ನಗರಸಭೆ ಪೌರಾಯುಕ್ತ ಮಂಜುನಾಥ್, ಜೆಡಿಎಸ್ ಮುಖಂಡ ತಾದೂರು ರಘು, ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.