ADVERTISEMENT

ಚಿಕ್ಕಬಳ್ಳಾಪುರ | ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬದಲಾವಣೆ ಗುಸುಗುಸು

ಅಹಿಂದ ವರ್ಗಕ್ಕೆ ಮಣೆ ಸಾಧ್ಯತೆ: ಗಂಗರೇಕಾಲುವೆ ನಾರಾಯಣಸ್ವಾಮಿಗೆ ಅಧ್ಯಕ್ಷ ಸ್ಥಾನ?

ಡಿ.ಎಂ.ಕುರ್ಕೆ ಪ್ರಶಾಂತ
Published 10 ಜುಲೈ 2024, 7:18 IST
Last Updated 10 ಜುಲೈ 2024, 7:18 IST
<div class="paragraphs"><p>ಗಂಗರೇಕಾಲುವೆ ನಾರಾಯಣಸ್ವಾಮಿ</p></div>

ಗಂಗರೇಕಾಲುವೆ ನಾರಾಯಣಸ್ವಾಮಿ

   

ಚಿಕ್ಕಬಳ್ಳಾಪುರ: ಹಲವು ತಿಂಗಳಿನಿಂದ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಕೇಳಿಬರುತ್ತಿತ್ತು. ನಾಯಕರ ನಡುವೆ ಚರ್ಚೆಗಳೂ ನಡೆದಿದ್ದವು. ಈಗ ಆ ಪರ್ವ ಮತ್ತಷ್ಟು ಜೋರಾಗಿದೆ. 

ಗೌರಿಬಿದನೂರು ತಾಲ್ಲೂಕಿನ ಕೆ.ಎನ್.ಕೇಶವರೆಡ್ಡಿ ಏಳು ವರ್ಷಗಳಿಂದ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದಾರೆ. ಈಗ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿಯೂ ನೇಮಿಸಲಾಗಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಕಾರಣ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ತೊರೆಯುವರು ಎನ್ನುವ ಮಾತುಗಳು ಇವೆ.  

ADVERTISEMENT

ಈಗಾಗಲೇ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರುಗಳು ಕೇಳಿ ಬರುತ್ತಿವೆ. ಅದರಲ್ಲಿಯೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕುರುಬ ಸಮುದಾಯದ ಮುಖಂಡ ಗಂಗರೇಕಾಲುವೆ ನಾರಾಯಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಂಚೇನಹಳ್ಳಿ ಪ್ರಕಾಶ್, ಮುಖಂಡ ಯಲುವಳ್ಳಿ ರಮೇಶ್ ಅವರ ಹೆಸರುಗಳು ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆಯಲ್ಲಿವೆ.

ಚಿಕ್ಕಬಳ್ಳಾಪುರ ಹಾಗೂ ಉಳಿದ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ನ ಪ್ರಮುಖ ಮುಖಂಡರನ್ನು ಈ ಬಗ್ಗೆ ಕೇಳಿದರೆ, ಬಹುತೇಕ ಮಂದಿ ಗಂಗರೇಕಾಲುವೆ ನಾರಾಯಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಇರುವ ಬಗ್ಗೆ ಮಾಹಿತಿ ನೀಡುವರು.

2018 ಮತ್ತು 2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಗಂಗರೇಕಾಲುವೆ ನಾರಾಯಣಸ್ವಾಮಿ ಒತ್ತಾಯಿಸಿದ್ದರು. ಕಾಂಗ್ರೆಸ್ ವೀಕ್ಷಕರು ಸಿದ್ಧಗೊಳಿಸಿದ ಪಟ್ಟಿಯಲ್ಲಿ ಅವರ ಹೆಸರು ಇತ್ತು. ಆದರೆ ಟಿಕೆಟ್ ದೊರೆಯಲಿಲ್ಲ. ನಂತರದ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪಕ್ಷದ ರಾಜ್ಯ ಮತ್ತು ಜಿಲ್ಲೆಯ ಪ್ರಮುಖ ನಾಯಕರು ನೀಡಿದ್ದರು. 

ನಾರಾಯಣಸ್ವಾಮಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಚಿರಪರಿಚಿತರು. ನಾರಾಯಣಸ್ವಾಮಿ ಅವಿಭಜಿತ ಕೋಲಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದವರು.

ಅಹಿಂದಕ್ಕೆ ಮನ್ನಣೆ: ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನದಲ್ಲಿ ಹಲವು ವರ್ಷಗಳಿಂದ ಒಕ್ಕಲಿಗ ಸಮುದಾಯದವರು ಇದ್ದಾರೆ. ಒಕ್ಕಲಿಗ ಸಮುದಾಯದ ಕೇಶವರೆಡ್ಡಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಇದೇ ಸಮುದಾಯದವರು. ಬಾಗೇಪಲ್ಲಿ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ, ಕಾಂಗ್ರೆಸ್ ಬೆಂಬಲಿಸಿರುವ ಗೌರಿಬಿದನೂರು ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಸಹ ಇದೇ ಸಮುದಾಯದವರು. ಪಕ್ಷದಲ್ಲಿ ಒಕ್ಕಲಿಗ ಸಮುದಾಯದ ಬಹಳಷ್ಟು ನಾಯಕರು ಮುಂಚೂಣಿಯಲ್ಲಿ ಇದ್ದಾರೆ.

ಈ ಕಾರಣದಿಂದ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಅಹಿಂದ ಸಮುದಾಯಗಳಿಗೆ ನೀಡಬೇಕು ಎನ್ನುವ ಕೂಗು ಸಹ ಇದೆ. ಇದಕ್ಕೆ ಪುಷ್ಠಿಯಾಗಿಯೇ ಗಂಗರೇಕಾಲುವೆ ನಾರಾಯಣಸ್ವಾಮಿ ಅವರ ಹೆಸರು ಕೇಳಿ ಬರುತ್ತಿವೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಅಹಿಂದ ಸಮುದಾಯಗಳು ಕಾಂಗ್ರೆಸ್ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿವೆ. ಲೋಕಸಭೆ ಚುನಾವಣೆಯಲ್ಲಿಯೂ ಈ ಮತಗಳು ದೊಡ್ಡ ಸಂಖ್ಯೆಯಲ್ಲಿಯೇ ಕಾಂಗ್ರೆಸ್‌ಗೆ ದೊರೆತಿದೆ. ಅಹಿಂದ ಸಮುದಾಯಗಳಲ್ಲಿ ಒಂದಾದ ಕುರುಬ ಸಮುದಾಯಕ್ಕೆ ಜಿಲ್ಲೆಯಲ್ಲಿ ಸದ್ಯ ಯಾವುದೇ ಪ್ರಮುಖ ಹುದ್ದೆ ನೀಡಿಲ್ಲ. ಈ ಎಲ್ಲ ಲೆಕ್ಕಾಚಾರಗಳನ್ನು ಆಧರಿಸಿ ನಾರಾಯಣಸ್ವಾಮಿ ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನುವ ಮಾತುಗಳಿವೆ. 

ಈಗಾಗಲೇ ಪಕ್ಷದ ವೇದಿಕೆಗಳಲ್ಲಿಯೂ ನಾಯಕರು ಈ ಬಗ್ಗೆ ಚರ್ಚಿಸಿದ್ದಾರೆ ಎನ್ನುತ್ತವೆ ಕಾಂಗ್ರೆಸ್ ಮೂಲಗಳು.

ಚರ್ಚೆಯಲ್ಲಿದೆ; ಭರವಸೆ ನೀಡಿದ್ದಾರೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಮುಖವಾಗಿ ಚರ್ಚೆಯಲ್ಲಿ ಇದೆ ಎನ್ನುವುದು ಗೊತ್ತಿದೆ. ಈ ಬಗ್ಗೆ ಕೆಲವು ರಾಜ್ಯ ನಾಯಕರು ಸಹ ತಿಳಿಸಿದ್ದಾರೆ. ಈಗಾಗಲೇ ಕೆಲವು ಸಭೆಗಳೂ ಸಹ ನಡೆದಿವೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿದ್ದೇವೆ. ಈ ಹಿಂದಿನಿಂದಲೂ ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದೇವೆ. ಏನಾಗುತ್ತದೆಯೊ ನೋಡೋಣ ಎಂದು ಗಂಗರೇಕಾಲುವೆ ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ನಾಯಕರ ಜೊತೆ ಚರ್ಚಿಸಿ ತೀರ್ಮಾನ

ಏಳು ವರ್ಷಗಳಿಂದ ಅಧ್ಯಕ್ಷನಾಗಿ ಪಕ್ಷ ಸಂಘಟಿಸಿದ್ದೇನೆ. ಈಗ ನಗರಾಭಿವೃದ್ಧಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಗಳು ಸದ್ಯಕ್ಕೆ ನಡೆದಿಲ್ಲ. ಆದರೆ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು. 

ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು ಸಭೆ ನಡೆಸಿ ಈ ಬಗ್ಗೆ ತೀರ್ಮಾನಕೈಗೊಳ್ಳುವರು. ನನಗೆ ಐದೂ ವಿಧಾನಸಭಾ ಕ್ಷೇತ್ರಗಳ ಮುಖಂಡರು ಸಹಕಾರ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.