ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವ ಪೂರ್ಣ ಪಂಚಗ್ಯಾರಂಟಿ ಯೋಜನೆಗಳಿಂದ ಸಾಮಾನ್ಯ ಮತ್ತು ಅಸಹಾಯಕ ಕುಟುಂಬಗಳಿಗೆ ವರದಾನವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷ ಎಂ.ಸಿ. ಶಿವನಂದಸ್ವಾಮಿ ಹೇಳಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆಯಡಿ ಜುಲೈ 2023ರಿಂದ ಜುಲೈ 2024 ರವರೆಗೆ ಜಿಲ್ಲೆಯಲ್ಲಿ ಒಟ್ಟು 7,99,787 ಫಲಾನುಭವಿಗಳಿಗೆ ಪ್ರತಿ ತಿಂಗಳು ₹12 ಕೋಟಿಯಂತೆ ಈವರೆಗೆ ಒಟ್ಟು ₹165 ಕೋಟಿ ಸಹಾಯಧನ ನೀಡಲಾಗಿದೆ. ಶೇ 98ರಷ್ಟು ಪ್ರಗತಿಯಾಗಿದೆ. ಶಕ್ತಿ ಯೋಜನೆಯಲ್ಲಿ ಸಾರಿಗೆ ಇಲಾಖೆ ಬಸ್‌ಗಳಲ್ಲಿ ಜಿಲ್ಲೆಯಲ್ಲಿ 2,90,64,758 ಮಹಿಳೆಯರು ಪ್ರವಾಸ ಮಾಡಿದ್ದಾರೆ. ₹12 ಕೋಟಿಯಷ್ಟು ಯೋಜನೆಯ ಲಾಭ ಪಡೆದಿದ್ದಾರೆ ಎಂದು ಹೇಳಿದರು.
ಗೃಹಜ್ಯೋತಿ ಯೋಜನೆಯಡಿ ₹147 ಕೋಟಿ ಒದಗಿಸಲಾಗಿದ್ದು, 2,14,120 ಮನೆಗಳಿಗೆ ಸೊನ್ನೆ ಬಿಲ್ ಸೌಲಭ್ಯ ದೊರೆತಿದೆ. ಗೃಹಲಕ್ಷ್ಮಿ ಯೋಜನೆಯಡಿ ₹657 ಕೋಟಿ 2,68,948 ಜನರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಕೆಲ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಶೇ 100ರಷ್ಟು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯ 8,457 ನಿರುದ್ಯೋಗಿಗಳು ನೋಂದಾಯಿಸಿದ್ದು, ₹53 ಕೋಟಿ ಫಲಾನುಭವಿಗಳಿಗೆ ಜಮೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ಕ್ಷೇತ್ರದಲ್ಲಿ ಒಂದೊಂದು ಗ್ಯಾರಂಟಿ ಯೋಜನೆಯ ಗ್ಯಾರಂಟಿ ಆದಾಲತ್ ನಡೆಸಲಾಗುವುದು. ಆ ಮೂಲಕ ಸರ್ಕಾರ ಯೋಜನೆಗಳನ್ನು ಎಲ್ಲ ಕುಟುಂಬಗಳಿಗೆ ದೊರಕಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ‘ಸರ್ಕಾರ ಜಾರಿಗೆ ತಂದಿರುವ ಉಪಯುಕ್ತ ಯೋಜನೆಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿ ಹಳ್ಳಿಗಳ ಪ್ರತಿ ಮನೆಗೆ ತಿಳಿಸುವುದು ಹಾಗೂ ಅರಿವು ಮೂಡಿಸುವ ಅಗತ್ಯವಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ರಾಜಗೋಪಾಲ್, ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಹೇಮಾವತಿ, ಅವ್ವಳ್ಳಿ ಕೃಷ್ಣೇಗೌಡ, ಎಸ್.ಎನ್. ಮಂಜುನಾಥ್, ಸಮಿತಿಯ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಮಲ್ಲೇಶ್, ಎನ್.ಜಿ. ರಮೇಶ್, ಚಂದ್ರಮ್ಮ, ಸದಸ್ಯರಾದ ಜೇಮ್ಸ್ ಡಿಸೋಜ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.