ADVERTISEMENT

ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 14:29 IST
Last Updated 31 ಜನವರಿ 2024, 14:29 IST
ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೂಡಿಗೆರೆ ಪಟ್ಟಣಕ್ಕೆ ಬುಧವಾರ ಪ್ರಥಮ ಬಾರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕರ್ತರತ್ತ ಕೈ ಬೀಸಿದರು
ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೂಡಿಗೆರೆ ಪಟ್ಟಣಕ್ಕೆ ಬುಧವಾರ ಪ್ರಥಮ ಬಾರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕರ್ತರತ್ತ ಕೈ ಬೀಸಿದರು   

ಮೂಡಿಗೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯೊಂದಿಗೆ ಬಿಜೆಪಿಯು ರಾಜ್ಯದ 28ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬುಧವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್‍ನವರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ಆರಂಭಿಸಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಮತ್ತೊಂದೆಡೆ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನಂತರ ಉಂಟಾಗಿರುವ ವಾತಾವರಣದಿಂದ ಕಾಂಗ್ರೆಸ್ ಭಯಭೀತವಾಗಿದೆ. ಕಾಂಗ್ರೆಸ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೋಗಸ್ ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿದ್ದು, ಅವರ ಗ್ಯಾರಂಟಿ ಜನರಿಗೆ ಇಂದಿಗೂ ತಲುಪಿಲ್ಲ. ಇದರಿಂದ ಕಾಂಗ್ರೆಸ್ ಸೋಲನ್ನು ಒಪ್ಪಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಕಾಂಗ್ರೆಸ್ ಈ ರಾಜ್ಯದ ಜನರಿಗೆ ಅನ್ಯಾಯ ಮಾಡುವುದಕ್ಕೆ ಬಿಜೆಪಿ ಬಿಡುವುದಿಲ್ಲ ಎಂದು ಗುಡುಗಿದರು.

ಕಾಂಗ್ರಸ್‌ ಸರ್ಕಾರ ಆಡಳಿತಕ್ಕೆ ಬಂದು 8 ತಿಂಗಳಾಗಿವೆ. ಆದರೆ, ಇದೂವರೆಗೂ ಒಂದೇ ಒಂದು ಜನಪರ ಹೊಸ ಯೋಜನೆಯನ್ನು ಘೋಷಣೆ ಮಾಡಿಲ್ಲ. ಗ್ಯಾರಂಟಿಗಳಿಂದ ಶಾಲೆಗೆ ತೆರಳುವ ಮಕ್ಕಳು ಬಸ್ಸಿಲ್ಲದೇ ಪರದಾಡುವಂತಾಗಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಹಳ್ಳ ಹಿಡಿದಿದೆ’ ಎಂದು ದೂರಿದರು.

ADVERTISEMENT

ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದಲ್ಲಿ ಹನುಮಾನ್ ಧ್ವಜ ಹಾರಿಸುವುದಕ್ಕೂ ರಾಜ್ಯಸರ್ಕಾರ ವಿರೋಧ ಮಾಡಿದ್ದರಿಂದ ರಾಜ್ಯದಲ್ಲಿರುವ ಪ್ರತಿಯೊಬ್ಬ ರಾಮಭಕ್ತನಿಗೂ ನೋವುಂಟಾಗಿದೆ. ರಾಜ್ಯದಲ್ಲಿ ಹನುಮಾನ್ ಧ್ವಜ ಹಾರಿಸಲು ಕಾಂಗ್ರೆಸ್ ವಿರೋಧ ಮಾಡುತ್ತಿರುವುದು ನಾಚಿಗೇಡಿನ ಸಂಗತಿ. ಇದನ್ನು ರಾಮ ಭಕ್ತರಾಗಲಿ, ಬಿಜೆಪಿಯಾಗಲಿ ಸಹಿಸುವುದಿಲ್ಲ ಎಂದು ಹೇಳಿದರು.

ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜೆ.ಎಸ್ ರಘು, ಪದಾಧಿಕಾರಿಗಳಾದ ದೀಪಕ್ ದೊಡ್ಡಯ್ಯ, ಮನೋಜ್ ಹಳೆಕೋಟೆ, ಪ್ರಮೋದ್ ದುಂಡುಗ, ಕಲ್ಲೇಶ್, ಭರತ್ ಕನ್ನೆಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.