ಚಿಕ್ಕಮಗಳೂರು: ಯುವಪೀಳಿಗೆ ದೇಶದ ಸಂಸ್ಕೃತಿ, ಸಂಪ್ರದಾಯ ಮೈಗೂಡಿಸಿಕೊಳ್ಳಬೇಕು. ಮಾತೃಭಾಷೆಗೆ ಒತ್ತು ನೀಡಬೇಕು ಎಂದು ಜಿಲ್ಲಾಪಂಚಾಯಿತಿ ಸದಸ್ಯ ರವೀಂದ್ರ ಬೆಳವಾಡಿ ಸಲಹೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾಲ್ಲೂಕಿನ ಹಿರೇಗೌಜದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಯುವಪೀಳಿಗೆ ಪಾಶ್ಚಾತ್ಯ ಸಂಸ್ಕೃತಿ ಮತ್ತು ಆಂಗ್ಲ ಭಾಷೆ ವ್ಯಾಮೋಹಕ್ಕೆ ಒಳಗಾಗುತ್ತಿದ್ದಾರೆ. ಅದರಿಂದ ದೇಸಿ ಕಲೆ, ಸಂಸ್ಕೃತಿ, ಸಂಪ್ರದಾಯಕ್ಕೆ ಹಿನ್ನಡೆಯಾಗುತ್ತಿದೆ ಎಂದು ವಿಷಾಧಿಸಿದರು.
ಮಾನವನ ಸ್ವಾರ್ಥದಿಂದ ಅರಣ್ಯ ನಾಶ ಹೊಂದುತ್ತಿದೆ. ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗುತ್ತಿದೆ. ಅತೀವೃಷ್ಠಿ, ಅನಾವೃಷ್ಠಿ ಸಂಭವಿಸುತ್ತಿದೆ. ಅದನ್ನು ಎಲ್ಲರು ಅರ್ಥ ಮಾಡಿಕೊಳ್ಳಬೇಕು. ಸಸಿ ನೆಟ್ಟು ಪೋಷಿಸಲು ಮುಂದಾಗಬೇಕು ಎಂದು ಹೇಳಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಮಾತನಾಡಿ, ರಾಷ್ಟ್ರೀಯ ಅರಣ್ಯ ನೀತಿ ಪ್ರಕಾರ ದೇಶದಲ್ಲಿ ಶೇ 33ರಷ್ಟು ಅರಣ್ಯ ಇರಬೇಕು. ಆಗ ದೇಶದಲ್ಲಿ ಪ್ರಕೃತಿ ವಿಕೋಪಗಳ ಸಂಭವ ಕಡಿಮೆಯಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ಎನ್.ಆನಂದಪ್ಪ ಮಾತನಾಡಿ, ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲೆಯಲ್ಲಿ ಪ್ರತಿವರ್ಷ ಪರಿಸರ ದಿನಾಚರಣೆ ನಡೆಸಲಾಗುತ್ತಿದೆ ಎಂದರು.
ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು. ಸಾಹಿತ್ಯ ರಚನೆಯಲ್ಲಿ ಪರಿಸರದ ಪ್ರೇರಣೆ ವಿಷಯ ಕುರಿತು ಶಿಕ್ಷಕ ಎಸ್.ಡಿ.ಶರಣಗೌಡ, ಕುವೆಂಪು ಕಾವ್ಯದಲ್ಲಿ ಪ್ರಕೃತಿಯ ಸೊಬಗು ಕುರಿತು ವೀರೇಶಕೌಲಗಿ ಉಪನ್ಯಾಸ ನೀಡಿದರು.
ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಎಚ್.ಪಿ.ದೇವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಬಾಲು ಕನ್ನೇಹಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಜಯಣ್ಣ, ವಿಷಯ ಪರಿವೀಕ್ಷಕಿ ಅರುಣಕುಮಾರಿ, ಶಿಕ್ಷಕ ಬಿ.ಎಂ.ಜ್ಞಾನಮೂರ್ತಿ, ಶಿಕ್ಷಕಿ ಲತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.