ADVERTISEMENT

ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಿ: ಜಿಲ್ಲಾಧಿಕಾರಿ ಕೆ.ಎನ್.ರಮೇಶ್

ಕೈಗಾರಿಕಾ ಸ್ಪಂದನಾ ಸಭೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 4:52 IST
Last Updated 21 ಜೂನ್ 2022, 4:52 IST
ಚಿಕ್ಕಮಗಳೂರಿನಲ್ಲಿ ಏರ್ಪಡಿಸಿದ್ದ ಕೈಗಾರಿಕಾ ಸ್ಪಂದನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿದರು. ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಇದ್ದರು.
ಚಿಕ್ಕಮಗಳೂರಿನಲ್ಲಿ ಏರ್ಪಡಿಸಿದ್ದ ಕೈಗಾರಿಕಾ ಸ್ಪಂದನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿದರು. ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಇದ್ದರು.   

ಚಿಕ್ಕಮಗಳೂರು: ತಾಲ್ಲೂಕಿನ ಹೊಸಕೋಟೆ ಗ್ರಾಮದ 150 ಎಕರೆ ಜಾಗದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೈಗಾರಿಕಾ ಸ್ಪಂದನಾ ಸಭೆಯಲ್ಲಿ ಮಾತನಾಡಿದರು. ತಾಲ್ಲೂಕಿನ ಅಂಬಳೆ ಹೋಬಳಿಯ ಹೊಸಕೋಟೆ ಗ್ರಾಮದ ಸರ್ವೆ ನಂಬರ್ 21ರಲ್ಲಿನ ಸರ್ಕಾರಿ ಜಾಗ ಇದ್ದು, ಕೈಗಾರಿಕಾ ಪ್ರದೇಶಕ್ಕೆ ಸೂಕ್ತವಾಗಿದೆ. ಕಂದಾಯ ಹಾಗೂ ಕೈಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ, ಪ್ರಸ್ತಾವ ಸಲ್ಲಿಸಬೇಕು ಎಂದು ಹೇಳಿದರು.

ನಗರಸಭೆ ವತಿಯಿಂದ ಅಂಬಳೆ ಕೈಗಾರಿಕಾ ಪ್ರದೇಶದಲ್ಲಿ ಒಳಚರಂಡಿ ನಿರ್ಮಿಸಲು ಕಾಮಗಾರಿ ಅಂದಾಜುಪಟ್ಟಿ ಸಿದ್ಧಪಡಿಸಬೇಕು. ಬೀರೂರು ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ದೀಪ ದುರಸ್ಥಿಗೆ ಮೆಸ್ಕಾಂ ಅಧಿಕಾರಿಗಳು ಶೀಘ್ರ ಕ್ರಮವಹಿಸಬೇಕು ಎಂದರು.

ADVERTISEMENT

ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ವಿಳಂಬ ನೀತಿ ಅನುಸರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.

ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಪ್ರೋತ್ಸಾಹಧನ ಹೆಚ್ಚು ದೊರಕಿಸಿಕೊಡುವುದಾಗಿ, ಮಧ್ಯವರ್ತಿಗಳು ಜನರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ದಲ್ಲಾಳಿಗಳ ಹಾವಳಿ ತಪ್ಪಿಸಲು ಹೆಲ್ಪ್‌ ಡೆಸ್ಕ್ ಸ್ಥಾಪಿಸಬೇಕು ಎಂದು ಹೇಳಿದರು.

‘ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಡಿಪಿಆರ್ ತಯಾರಿಸಿ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಕಡೂರು ತಾಲ್ಲೂಕು ಸಖರಾಯಪಟ್ಟಣ ಹೋಬಳಿಯಲ್ಲಿ ಹಲಸಿನ ಹಣ್ಣಿನ ಕ್ಲಸ್ಟರ್ ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ಧಪಡಿಸಲು ಟೆಕ್ಸಾಸ್ ಸಂಸ್ಥೆಗೆ ವಹಿಸಲಾಗಿದೆ’ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ಧರಾಜು ಹೇಳಿದರು.

ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸೈಯ್ಯದ್ ಮುನೀರ್ ಅಹಮದ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಮಹೇಶ್, ನಗರಸಭೆ ಆಯುಕ್ತ ಬಸವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.