ಚಿಕ್ಕಮಗಳೂರು:‘ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ’ ಎಂದು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ನಗರಸಭೆ ವತಿಯಿಂದ ನಗರದ ವಾರ್ಡ್ ನಂ.26, 27ರಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಇಲಾಖೆ, ಮೆಸ್ಕಾಂ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಗೆ ಬರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ. ದೇವಸ್ಥಾನ, ಸಮುದಾಯ ಭವನ, ರಸ್ತೆ ದುರಸ್ತಿಗೆ ಅನುದಾನ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಸರ್ಕಾರದ ಅನುದಾನದ ಜೊತೆಗೆ ಸ್ಥಳೀಯ ಸಂಸ್ಥೆಗಳ ಅನುದಾನವನ್ನು ಬಳಸಿಕೊಂಡು ಚರಂಡಿ, ರಸ್ತೆ ದುರಸ್ತಿ ಮಾಡಬೇಕು. ಜೊತೆಗೆ ನೀರು, ವಿದ್ಯುತ್, ಸ್ವಚ್ಛತೆ ಮುಂತಾದವುಗಳಿಗೆ ಸ್ಪಂದಿಸಲು ಜನಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದರು.
ಸೋಮೇಶ್ವರ ದೇವಸ್ಥಾನದ ಅಭಿವೃದ್ಧಿಗೆ ₹20 ಲಕ್ಷ ಮಂಜೂರು ಮಾಡಲಾಗಿದೆ. ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ₹10 ಲಕ್ಷ ಮಂಜೂರು ಮಾಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.
ನಗರ ಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ನಗರದಲ್ಲಿ ಯುಜಿಡಿ ಮತ್ತು ಅಮೃತ್ ಯೋಜನೆಯ ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದೆ. ವಾರ್ಡಿನ ನಾಗರಿಕರು ಕಸವನ್ನು ಕಸ ಸಂಗ್ರಹಿಸುವ ಗಾಡಿಗೆ ಹಾಕುವ ಮೂಲಕ ಸ್ವಚ್ಚತೆ ಕಾಪಾಡಲು ಕೈಜೋಡಿಸಬೇಕೆಂದು ಮನವಿ ಮಾಡಿದರು.
ನಗರಸಭೆ ಸದಸ್ಯ ಟಿ.ರಾಜಶೇಖರ್, ನಗರ ಸಭೆ ಮಾಜಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿದರು. ಪೌರಾಯುಕ್ತ ಬಿ.ಸಿ. ಬಸವರಾಜ್, ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಸದಸ್ಯ ಶಾದಬ್ ಆಲಂಖಾನ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.