ADVERTISEMENT

ಚಿಕ್ಕಮಗಳೂರು: ಜಿಲ್ಲೆಯ 7 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:54 IST
Last Updated 28 ಜೂನ್ 2024, 15:54 IST

ಚಿಕ್ಕಮಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಜೂನ್ 30 ರಂದು ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ತಿಳಿಸಿದರು.

ಟಿಇಟಿ ಪರೀಕ್ಷೆ ಸಂಬಂಧ ಕಚೇರಿಯಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 1,703 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ಮಾರ್ಗಕ್ಕೆ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಿಗೂ ವೈದ್ಯಕೀಯ ಸಿಬ್ಬಂದಿ ನೇಮಿಸಲಾಗಿದೆ ಎಂದು ಹೇಳಿದರು

ಪರೀಕ್ಷಾ ಕಾರ್ಯಕ್ಕೆ 7 ಅಧೀಕ್ಷಕರು, 7 ಸ್ಥಾನಿಕ ದಳ, 98 ಕೊಠಡಿ ಮೇಲ್ವಿಚಾರಕರು, 4 ಕಾಯ್ದಿರಿಸಿದ ಸಿಬ್ಬಂದಿ, 7 ವಿಷಯ ನಿರ್ವಾಹಕರು, 16 ಡಿ.ದರ್ಜೆ ಸಹಾಯಕರು, 16 ಪೊಲೀಸ್ ಸಿಬ್ಬಂದಿ, 14 ಆರೋಗ್ಯ ಸಿಬ್ಬಂದಿ, ಇಬ್ಬರು ಮಾರ್ಗ ಅಧಿಕಾರಿಗಳು, 7 ವಿಡಿಯೊ ಕವರೇಜ್ ಸಿಬ್ಬಂದಿ, 7 ಮೊಬೈಲ್ ಸ್ವಾಧೀನಾಧಿಕಾರಿಗಳು, ವೀಕ್ಷಕರು ಸೇರಿದಂತೆ ಒಟ್ಟು 2023 ಅಧಿಕಾರಿ, ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

ಪ್ರಶ್ನೆಪತ್ರಿಕೆಯನ್ನು ಖಜಾನೆಗೆ ರವಾನಿಸಲು ತ್ರಿಸದಸ್ಯರ ಸಮಿತಿ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ, ಗಾಳಿ ಬೆಳಕು, ಶೌಚಾಲಯ, ಕುಡಿಯುವ ನೀರು, ಮೂಲಸೌಕರ್ಯಗಳನ್ನು ಪರಿಶೀಲಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿಡಿಯೊ ಕವರೇಜ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಸಹಾಯವಾಣಿ ಸ್ಥಾಪಿಸಲಾಗಿದೆ. 9448999334, 9481155696 ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದುಕೊಳ್ಳಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ನೋಡಲ್ ಅಧಿಕಾರಿಗಳು, ಜಿಲ್ಲಾ ಖಜಾನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.