ಮುತ್ತಿನಕೊಪ್ಪ (ಎನ್.ಆರ್.ಪುರ): ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಸರ್ಕಾರ ಶಿಕ್ಷಕರನ್ನು ನೇಮಿಸದೆ ಇದ್ದರೆ ಮಕ್ಕಳ ವರ್ಗಾವಣೆ ಪತ್ರ ಪಡೆದು ಸಾಮೂಹಿಕವಾಗಿ ಬೇರೆ ಶಾಲೆಗೆ ಸೇರಿಸಲಾಗುವುದು ಅಥವಾ ಶಾಲೆಗೆ ಬೀಗಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಲಾಭಿವೃದ್ಧಿ ಸಮಿತಿ ಹೇಳಿದೆ.
ಈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಪ್ರಸ್ತುತ ಸುಮಾರು 120 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 6 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಒಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ವಾರದಲ್ಲಿ ಮೂರು ದಿನ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಏಕಕಾಲದಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮದ ತರಗತಿಗಳು 11 ಕೊಠಡಿಗಳಲ್ಲಿ ನಡೆಯುವುದರಿಂದ ಕನಿಷ್ಠ 10 ಶಿಕ್ಷಕರು ಬೇಕಾಗುತ್ತದೆ. ಶಾಲೆಗೆ ಸುಸಜ್ಜಿತ ಕೊಠಡಿ, ಮೂಲ ಸೌಲಭ್ಯ ಇದೆ. ಆದರೆ, ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿ ದೂರಿದೆ.
ಶಾಲೆಗೆ ಆಂಗ್ಲ ಮಾಧ್ಯಮವನ್ನು ಮಂಜೂರು ಮಾಡುವಾಗ ಬೇಕಾಗುವ ಶಿಕ್ಷಕರ ಹುದ್ದೆಯನ್ನು ಮಂಜೂರು ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಹೆಚ್ಚುವರಿ ಶಿಕ್ಷಕರನ್ನು ನೇಮಿಸುವಂತೆ ಅಥವಾ ಅತಿಥಿ ಶಿಕ್ಷಕರನ್ನು ನೇಮಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. ಮುಖ್ಯಶಿಕ್ಷಕರಿಗೆ ಶಾಲಾ ಆಡಳಿತ ನಿರ್ವಹಣೆ ಮಾಡುವ ಜವಾಬ್ದಾರಿ ಇರುವುದರಿಂದ ಅವರು ನಿರಂತರ ತರಗತಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಕನಿಷ್ಠ ಇಬ್ಬರು ಶಿಕ್ಷಕರನ್ನು ನೇಮಿಸಲು ಕ್ರಮಕೈಗೊಳ್ಳಬೇಕು. ಇಲ್ಲದೆ ಇದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಎಲ್.ಮನೋಹರ್ ತಿಳಿಸಿದರು.
ಅತಿಥಿ ಶಿಕ್ಷಕರನ್ನು ನೇಮಿಸಲು ಸಾಧ್ಯವಿಲ್ಲ
ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 6 ಹುದ್ದೆ ಮಂಜೂರಾಗಿದ್ದು ಅದನ್ನು ತುಂಬಲಾಗಿದೆ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದು ಅತಿಥಿ ಶಿಕ್ಷಕರನ್ನು ನೀಡಲು ಸಾಧ್ಯವಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ವಾರಕ್ಕೆ 3ದಿನ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬದಲಿಗೆ ಇನ್ನೊಬ್ಬರು ಶಿಕ್ಷಕರನ್ನು ನಿಯೋಜಿಸಲಾಗಿದೆ. ಯಾವುದೇ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅತಿಥಿ ಶಿಕ್ಷಕರನ್ನು ನೇಮಿಸಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.