ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಮೂರು ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಾಲ್ಲೂಕಿನ ಸಿರಿಗೆರೆಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಸಮಾರಂಭಕ್ಕೆ ಮಂಗಳವಾರ ಆಗಮಿಸಿದ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.
ರಾಜ್ಯ ಸರ್ಕಾರದಿಂದ ಈಗಾಲೇ ಎರಡೂವರೆ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಸೇತುವೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಮನೆ ಕಳೆದುಕೊಂಡವರಿಗೆ ₹ 5 ಲಕ್ಷ ಹಾಗೂ ಭಾಗಶಃ ಹಾನಿಗೆ ಒಂದು ಲಕ್ಷ ಕೊಡಲಾಗುತ್ತಿದೆ. ಮೊದಲಗಂತದಲ್ಲಿ ಸಂತ್ರಸ್ತರಿಗೆ ₹ 1 ಲಕ್ಷ ಬಿಡುಗಡೆ ಮಾಡಲಾಗಿದೆ. ನೆರೆ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ಕೆಲ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ರದ್ದು ಮಾಡಲಿದೆ ಎಂದರು.
ರೈತರ ಸಾಲಮನ್ನಾಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರದ ಯೋಜನೆ ಮುಂದುವರೆಸುತ್ತೇವೆ. ಹಂತಹಂತವಾಗಿ ರೈತರ ಸಾಲ ಮನ್ನಾ ಹಣವನ್ನು ಬಿಡುಗಡೆ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಧುಸ್ವಾಮಿ, ಸಂಸದರಾದ ಎ. ನಾರಾಯಣಸ್ವಾಮಿ, ಜಿ.ಎಂ.ಸಿದ್ದೇಶ್ವರ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.