ಚಿತ್ರದುರ್ಗ: ಹೃದ್ರೋಗ ಸಮಸ್ಯೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶೆ ಬಿ.ಕೆ.ಕೋಮಲಾ ಸೂಚಿಸಿದರು.
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿ ಅಸ್ವಸ್ಥತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಸೂಚನೆ ನೀಡಿದರು.
ಪ್ರಕರಣದಲ್ಲಿ ಗುರುವಾರ ರಾತ್ರಿ ಬಂಧಿತರಾಗಿರುವ ಶರಣರು ಅನಾರೋಗ್ಯದ ಕಾರಣಕ್ಕೆ ಶುಕ್ರವಾರ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ಸಮಸ್ಯೆ ಇರುವುದು ಖಚಿತವಾದ ಬಳಿಕ ದಾವಣಗೆರೆಯ ತಜ್ಞ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಧಾವಿಸಿ ಹೃದಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇದೆ ಎಂಬ ಬಗ್ಗೆ ವರದಿ ನೀಡಿದ್ದರು. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಅನುಮತಿ ಕೋರಿ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಅಕ್ಕಮಹಾದೇವಿ ಅವರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಮಧ್ಯಾಹ್ನ 2.45 ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಯಿತು. ಆರೋಗ್ಯದ ಸಮಸ್ಯೆಗೆ ಸಂಬಂಧಿಸಿದಂತೆ ವೈದ್ಯರು ನೀಡಿದ ದಾಖಲೆಗಳನ್ನು ಅರ್ಜಿದಾರರು ಹಾಜರುಪಡಿಸಲು ವಿಫಲರಾದರು. ಇದರಿಂದ ಅನುಮಾನಗೊಂಡ ನ್ಯಾಯಾಧೀಶರು ಆರೋಪಿ ಸ್ಥಾನದಲ್ಲಿ ಇರುವ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.