ADVERTISEMENT

ಚಿತ್ರದುರ್ಗ| ಬಾಲಕಾರ್ಮಿಕರ ಪತ್ತೆಗೆ ಕಾರ್ಯಪಡೆ ಚುರುಕಾಗಲಿ: ದಿವ್ಯಪ್ರಭು

ಯೋಜನಾ ಸೊಸೈಟಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 5:08 IST
Last Updated 25 ಫೆಬ್ರುವರಿ 2023, 5:08 IST
ದಿವ್ಯಪ್ರಭು ಜಿ.ಆರ್‌.ಜೆ
ದಿವ್ಯಪ್ರಭು ಜಿ.ಆರ್‌.ಜೆ   

ಚಿತ್ರದುರ್ಗ: ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ತಾಲ್ಲೂಕು ಮಟ್ಟದ ಕಾರ್ಯಪಡೆ ಹೊಟೇಲ್‌, ಅಂಗಡಿ, ಬಾರ್‌ ಸೇರಿದಂತೆ ಕೆಲಸದ ಸ್ಥಳಗಳ ಮೇಲೆ ದಿಢೀರ್‌ ದಾಳಿ ನಡೆಸಬೇಕು. ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಹೆಚ್ಚು ತಪಾಸಣೆ ಕಾರ್ಯಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

‘ಬಾಲಕಾರ್ಮಿಕ ಪದ್ಧತಿ ತಡೆ ಹಾಗೂ ನಿರ್ಮೂಲನೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಿಧಿಸಬೇಕು. ಜತೆಗೆ ಅರಿವು ಹಾಗೂ ಜನಜಾಗೃತಿ ಮೂಡಿಸಬೇಕು’ ಎಂದರು.

ADVERTISEMENT

‘ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಿ ತಪಾಸಣೆ ಮಾಡಿದ ವರದಿಯನ್ನು ತಾಲ್ಲೂಕು ಮಟ್ಟದ ಕಾರ್ಯಪಡೆಯು ಕಾಲ ಕಾಲಕ್ಕೆ ಜಿಲ್ಲಾಮಟ್ಟದ ಸಮಿತಿಗೆ ಸಲ್ಲಿಸಬೇಕು. ತಾಲ್ಲೂಕು ಮಟ್ಟದ ಸಮಿತಿ ಸಭೆ ನಡೆಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸಿ.ಎನ್‌.ಯಶೋಧರ ಮಾತನಾಡಿ, ‘ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸುತ್ತಿದೆ. ಪ್ರತಿ ತಾಲ್ಲೂಕಿನಲ್ಲಿಯೂ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಆದರೆ ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ದಾಳಿ ನಡೆಯುತ್ತಿಲ್ಲ’ ಎಂದು ಬೇಸರಿಸಿದರು.

‘2022ರ ಏಪ್ರಿಲ್‌ 1 ರಿಂದ ಈವರೆಗೆ 227 ತಪಾಸಣೆ ನಡೆಸಲಾಗಿದೆ. ಇದರಲ್ಲಿ ಮೂವರು ಬಾಲಕಾರ್ಮಿಕರನ್ನು ಪತ್ತೆ ಮಾಡಲಾಗಿದ್ದು, ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ ದಾಖಲಿಸಲಾಗಿದೆ. ಎರಡು ಪ್ರಕರಣಗಳು 18 ವರ್ಷ ಮೇಲ್ಪಟ್ಟಿರುವುದರಿಂದ ಮುಖ್ಯವಾಹಿನಿಗೆ ತರಲಾಗಿದೆ’ ಎಂದರು.

ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್‌ ಕುಮಾರ್‌ ಮಾತನಾಡಿ, ‘ತಾಲ್ಲೂಕು ಮಟ್ಟದ ಕಾರ್ಯಪಡೆ ಪ್ರತಿ ತಿಂಗಳು ದಾಳಿ ನಡೆಸಿ ವರದಿ ಸಲ್ಲಿಸಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಹಿರಿಯೂರು, ಹೊಸದುರ್ಗ ಹಾಗೂ ಚಿತ್ರದುರ್ಗದಲ್ಲಿ ಸಮಿತಿ ಸಭೆ ನಡೆಸಿ ವರದಿ ಸಲ್ಲಿಸಲಾಗಿದೆ. ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ಸಮಿತಿ ಸಭೆ ನಡೆಸಿ ವರದಿ ಸಲ್ಲಿಸಬೇಕಿದೆ. ಕಾರ್ಮಿಕ, ಶಿಕ್ಷಣ ಹಾಗೂ ಪೊಲೀಸ್‌ ಇಲಾಖೆಗಳು ಸಮನ್ವಯದೊಂದಿಗೆ ದಾಳಿ ನಡೆಸಲಾಗುತ್ತಿದೆ’ ಎಂದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ, ತಹಶೀಲ್ದಾರ್‌ ನಾಗವೇಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್‌.ಬಣಕಾರ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ ಇದ್ದರು.

9 ಬಾಲ ಕಾರ್ಮಿಕರ ರಕ್ಷಣೆ: ನ್ಯಾ.ಬಿ.ಕೆ.ಗಿರೀಶ್‌

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಇದೆ. ನಮ್ಮ ಸುತ್ತಮುತ್ತ ನಡೆಯುವ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಜಾಗೃತಿಯಾಗಬೇಕು. ಆ ಮೂಲಕ ಸಂವಿಧಾನದ ಆಶಯ ಪಾಲನೆ ಮಾಡೋಣ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಬಿ.ಕೆ.ಗಿರೀಶ್‌ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಆಶ್ರಯದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲಕಾರ್ಮಿಕರನ್ನು ನೋಡಿ, ಕಣ್ಣಿಗೆ ಕಂಡರೂ ಕಾಣಿಸದಂತೆ ಹೋಗುವುದು ಆತ್ಮವಂಚನೆ ಮಾಡಿಕೊಂಡಂತೆ. ಕಳೆದ ವರ್ಷ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ 9 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಲಾಯಿತು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ, ‘ಬಡತನ, ಅನಕ್ಷರತೆ, ಭವಿಷ್ಯದ ಬಗ್ಗೆ ಅರಿವಿಲ್ಲದೆ ಪೋಷಕರು ತಮ್ಮ ಮಕ್ಕಳನ್ನು ಬಾಲಕಾರ್ಮಿಕರಾಗಿ ನೇಮಿಸುವ ಸಾಧ್ಯತೆ ಇದೆ. ಇಂಥವರು ಕಂಡುಬಂದಲ್ಲಿ 112 ಅಥವಾ 1098 ಸಹಾಯವಾಣಿಗೆ ಕರೆ ಮಾಡಿ ರಕ್ಷಣೆ ಮಾಡಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್‌.ಬಣಕಾರ್‌ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಪನ್ಮೂಲ ವ್ಯಕ್ತಿ ಕೆ.ರಾಘವೇಂದ್ರ ಭಟ್‌ ಇದ್ದರು.

**

ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಶಿಕ್ಷಣ ಇಲಾಖೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

-ದಿವ್ಯಪ್ರಭು ಜಿ.ಆರ್‌.ಜೆ, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.