ADVERTISEMENT

ಚಿತ್ರದುರ್ಗ | ಸಿಎಂ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಜೂನ್ 28ಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 15:58 IST
Last Updated 26 ಜೂನ್ 2024, 15:58 IST

ಚಿತ್ರದುರ್ಗ: ‘ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟ ಹಣದ ದುರುಪಯೋಗ, ವಿವಿಧ ಯೋಜನೆಗಳಲ್ಲಿ ಭ್ರಷ್ಟಾಚಾರ ಮುಂತಾದ ಹಗರಣಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಳುಗಿದೆ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೂನ್‌ 28ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಬುಧವಾರ ಹೇಳಿದರು.

‘ಪರಿಶಿಷ್ಟ ಜಾತಿಯ ₹13,500 ಕೋಟಿ, ಪರಿಶಿಷ್ಟ ವರ್ಗದ ₹11,331 ಕೋಟಿ ಹಣವನ್ನು ಸಿದ್ದರಾಮಯ್ಯ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ನೂರಾರು ಕೋಟಿ ಅವ್ಯವಹಾರ ನಡೆದಿದ್ದು ಈಗಾಗಲೇ ಒಬ್ಬ ಸಚಿವರು ರಾಜೀನಾಮೆ ನೀಡಿದ್ದಾರೆ. ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಹೈದರಾಬಾದ್‍ನ ಬಾರ್‌ಗಳಲ್ಲಿ ಹಣ ಹರಿದಾಡುತ್ತಿದೆ. 700ಕ್ಕೂ ಹೆಚ್ಚು ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‌‘ಮಹಿಳೆಯರು, ವಿದ್ಯಾರ್ಥಿಗಳ ನೆರವಿಗೆ ಬಳಸಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ರಾಜ್ಯ ಸರ್ಕಾರ ಬಳಸಿರುವುದರಿಂದ ಜನರ ರಕ್ತ ಕುದಿಯುತ್ತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ. ಮುಖ್ಯಮಂತ್ರಿ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು. ಜೂನ್‌ 27ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವ ವಹಿಸಿಕೊಳ್ಳಲಿದ್ಧಾರೆ’ ಎಂದರು.

ADVERTISEMENT

ಬಿಜೆಪಿ ಮುಖಂಡ ಎಸ್.ತಿಪ್ಪೇಸ್ವಾಮಿ ಮಾತನಾಡಿ ‘ಬಿಜೆಪಿಯ ನಿರಂತರ ಪ್ರತಿಭಟನೆಗೆ ಎಚ್ಚೆತ್ತುಕೊಂಡ ಕಾಂಗ್ರೆಸ್ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಿತು. ಪರಿಶಿಷ್ಟ ವರ್ಗದ ₹187 ಕೋಟಿ ಹಣ ದುರುಪಯೋಗ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೂವರೆಗೂ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ವಿಶೇಷವೆಂದರೆ ಎಲ್ಲಾ ಇಲಾಖೆಯಲ್ಲೂ ಹಣದ ಕೊರತೆ ಎದ್ದು ಕಾಣುತ್ತಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್‍ ಸಿದ್ದಾಪುರ, ಪಿ.ಸಂಪತ್‍ಕುಮಾರ್, ಎಸ್ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್, ಪಾಲಯ್ಯ, ಕೆ.ಟಿ.ಕುಮಾರಸ್ವಾಮಿ, ಮಧುಗಿರಿ ಘಟಕದ ಅಧ್ಯಕ್ಷ ಹುನುಮಂತೇಗೌಡ, ಸೋಮೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.