ADVERTISEMENT

ಸಾಂಕ್ರಾಮಿಕ ರೋಗ ತಡೆಗೆ ನಿಗಾ ವಹಿಸಲು ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2024, 15:32 IST
Last Updated 21 ಸೆಪ್ಟೆಂಬರ್ 2024, 15:32 IST
ಚಿತ್ರದುರ್ಗದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಣ್ಗಾವಲು ಸಮಿತಿ ಸಭೆ ಶನಿವಾರ ನಡೆಯಿತು
ಚಿತ್ರದುರ್ಗದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಣ್ಗಾವಲು ಸಮಿತಿ ಸಭೆ ಶನಿವಾರ ನಡೆಯಿತು   

ಚಿತ್ರದುರ್ಗ: ‘ಸಾಂಕ್ರಾಮಿಕ ರೋಗಗಳು ಸೇರಿದಂತೆ ಪ್ರಾಣಿ ಹಾಗೂ ಕೀಟಜನ್ಯ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾ ಕಣ್ಗಾವಲು ಸಮಿತಿ ಸದಸ್ಯರು ಹೆಚ್ಚಿನ ನಿಗಾ ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಾಂಕ್ರಾಮಿಕ ರೋಗಗಳನ್ನು ಬಹುಬೇಗ ಪತ್ತೆ ಹಚ್ಚಿದರೆ, ಸಮುದಾಯದಲ್ಲಿ ಹೆಚ್ಚು ಜನರಿಗೆ ರೋಗ ಹರಡುವುದನ್ನು ತಡೆಗಟ್ಟಬಹುದು. ಕಲುಷಿತ ಆಹಾರ ಹಾಗೂ ನೀರಿನ ಸೇವನೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ಈಡಾಗುವ ಪ್ರಕರಣಗಳಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಸರಬರಾಜಿನ ವ್ಯತ್ಯಯ ಉಂಟಾಗಿದ್ದರೆ, ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತರಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ಈ ವರ್ಷ 294 ಹಾವು ಕಡಿತದ ಪ್ರಕರಣಗಳು ವರದಿಯಾಗಿವೆ. ಇವುಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ಸಾವು ಸಂಭವಿಸಿರುವುದು ದುರದೃಷ್ಟಕರ ಸಂಗತಿ. ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಾವು ಕಡಿತದ ಸಂದರ್ಭದಲ್ಲಿ ನೀಡಬೇಕಾದ ಪ್ರಥಮ ಚಿಕಿತ್ಸೆ ಹಾಗೂ ತಕ್ಷಣವೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ನಾಯಿ ಕಡಿತ ಪ್ರಕರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿಯೇ ಎಲ್ಲ ಲಸಿಕೆ ಹಾಗೂ ಚುಚ್ಚುಮದ್ದು ನೀಡಬೇಕು’ ಎಂದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶದಂತೆ ಜಿಲ್ಲಾ ಕಣ್ಗಾವಲು, ಜಿಲ್ಲಾ, ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ತ್ವರಿತ ಪ್ರತಿಕ್ರಿಯಾ ತಂಡಗಳನ್ನು ರಚಿಸಿ ಆದೇಶ ಹೊರಡಿಸಲಾಗುವುದು. ಸಮಗ್ರ ರೋಗಗಳನ್ನು ತಡೆಗಟ್ಟುವಲ್ಲಿ ಜಿಲ್ಲಾ ಕಣ್ಗಾವಲು ಸಮಿತಿ ಹಾಗೂ ಆರೋಗ್ಯ ಇಲಾಖೆಗೆ ಎಲ್ಲಾ ಇಲಾಖೆಗಳು ಸಹಕಾರ ನೀಡಬೇಕು’ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ ಕಂಬಾಳಿಮಠ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಆರ್.ಸಿ.ಎಚ್ ಅಧಿಕಾರಿ ಡಾ.ಅಭಿನವ್, ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.