ಸಿರಿಗೆರೆ (ಚಿತ್ರದುರ್ಗ): ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದ ಹೊರಗುತ್ತಿಗೆ ವೈದ್ಯ ಅಭಿಷೇಕ್ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಮಾನತುಗೊಳಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಅವರು ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಬುಧವಾರ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದರು. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆಡಳಿತ ವೈದ್ಯಾಧಿಕಾರಿ ನೀಡಿರುವ ವರದಿ ಆಧರಿಸಿ ಜಿಲ್ಲಾಧಿಕಾರಿ ಶುಕ್ರವಾರ ಕ್ರಮ ಕೈಗೊಂಡಿದ್ದಾರೆ.
ಭರಮಸಾಗರದವರಾದ ಅಭಿಷೇಕ್, ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಭರಮಸಾಗರ ಆರೋಗ್ಯ ಕೇಂದ್ರಕ್ಕೆ ಪ್ರಭಾರಿ ವೈದ್ಯರಾಗಿ ನಿಯೋಜನೆಗೊಂಡಿದ್ದರು. ಇವರ ಸಂಗಾತಿಯು ವೈದ್ಯಕೀಯ ಪದವೀಧರೆ ಎಂದು ಹೇಳಲಾಗಿದೆ.
ಈ ಜೋಡಿ ಪ್ರೀ ವೆಡ್ಡಿಂಗ್ ಶೂಟ್‌ಗಾಗಿ ನಾಲ್ವರು ಛಾಯಾಗ್ರಾಹಕರನ್ನು ಆರೋಗ್ಯ ಕೇಂದ್ರಕ್ಕೆ ಕರೆಸಿತ್ತು. ವ್ಯಕ್ತಿಯೊಬ್ಬನಿಗೆ ರೋಗಿಯ ವೇಷ ತೊಡಿಸಿ ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಟೀಕೆಗಳು ವ್ಯಕ್ತವಾಗಿದ್ದವು. ಅಭಿಷೇಕ್, ಪ್ರಭಾವಿ ಮನೆತನಕ್ಕೆ ಸೇರಿದವರು ಎನ್ನಲಾಗಿದೆ.
ಘಟನೆ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗೆ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.