ಚಿತ್ರದುರ್ಗ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆಗೆ ಸ್ಪರ್ಧಿಸಲು ಅಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮೂರು ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ಗೆ ಪೈಪೋಟಿ ಜೋರಾಗಿದೆ. ಕಾಂಗ್ರೆಸ್‌ನಲ್ಲಿ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ.
ಚಿತ್ರದುರ್ಗ ನಗರ ಹಾಗೂ ತಾಲ್ಲೂಕು ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರವನ್ನು ಬಿಜೆಪಿಯ ಜಿ.ಎಚ್. ತಿಪ್ಪಾರೆಡ್ಡಿ ಪ್ರತಿನಿಧಿಸುತ್ತಿದ್ದಾರೆ. ಎರಡೂವರೆ ದಶಕದಿಂದ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿರುವ ಅವರು ಮತ್ತೆ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಸಮರ್ಥರನ್ನು ಅಖಾಡಕ್ಕೆ ಇಳಿಸುವ ಲೆಕ್ಕಾಚಾರದಲ್ಲಿ ಇತರ ಪಕ್ಷಗಳು ತೊಡಗಿವೆ.
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಈ ಕ್ಷೇತ್ರದಲ್ಲಿ ಪಾರಂಪರಿಕ ಮತಗಳಿವೆ. 2018, 2013ರಲ್ಲಿ ಬಿಜೆಪಿ, 2008ರಲ್ಲಿ ಜೆಡಿಎಸ್ ಹಾಗೂ 2004ರಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಜಯ ಗಳಿಸಿದ್ದು, ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿ (ಎಎಪಿ)ಯೂ ಅಖಾಡಕ್ಕೆ ಇಳಿಯಲಿದೆ. ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಕ್ರಿಯವಾಗಿವೆ.
ತಿಪ್ಪಾರೆಡ್ಡಿ ಅವರ ವೈಯಕ್ತಿಕ ವರ್ಚಸ್ಸು ಕ್ಷೇತ್ರದಲ್ಲಿ ಪ್ರಬಲವಾಗಿದೆ. 1994ರಿಂದ ಈ ಕ್ಷೇತ್ರದಲ್ಲಿ ಐದು ಬಾರಿ ಗೆಲುವು ಸಾಧಿಸಿದ್ದಾರೆ. ಇವರು ಮತ್ತೆ ಸ್ಪರ್ಧೆಗೆ ಇಳಿಯುವ ಅವಕಾಶವನ್ನು ಬಿಜೆಪಿ ನೀಡುವುದೇ ಎಂಬ ಅನುಮಾನವೊಂದು ಕ್ಷೇತ್ರದಲ್ಲಿ ಹರಿದಾಡುತ್ತಿದೆ. ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಪುತ್ರ ಜಿ.ಎಸ್.ಅನಿತ್ ಕೂಡ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಇ. ಜಗದೀಶ್ ಅಖಾಡಕ್ಕೆ ಇಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್, ಮಾಜಿ ಶಾಸಕರಾದ ಎಸ್.ಕೆ. ಬಸವರಾಜನ್, ಎ.ವಿ. ಉಮಾಪತಿ ಸೇರಿ 12 ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್‌ನಿಂದ ಕಾಂತರಾಜು ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಜಾತಿ ಲೆಕ್ಕಾಚಾರ, ಪಕ್ಷದ ಸಿದ್ಧಾಂತ, ವೈಯಕ್ತಿಕ ವರ್ಚಸ್ಸು ಹೀಗೆ ಹಲವು ಅಂಶಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ಕ್ಷೇತ್ರದ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಮತದಾರರ ಮನೆ ಬಾಗಿಲು ತಟ್ಟಲು ಮುಂದಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ, ಪ್ರಧಾನಿ ನರೇಂದ್ರ ಮೋದಿ ಪ್ರಭಾವ, ಹಿಂದುತ್ವ ಸಿದ್ಧಾಂತವನ್ನು ಮುಂದಿಟ್ಟುಕೊಂಡು ಮತ ಕೇಳಲು ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎರಡು ಬಾರಿ ಚಿತ್ರದುರ್ಗಕ್ಕೆ ಭೇಟಿ ನೀಡಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿದ್ಯಾರ್ಥಿ ವೇತನ ಸ್ಥಗಿತ, ರೈತರ ಸಮಸ್ಯೆ, ಅಭಿವೃದ್ಧಿ ಕಾರ್ಯದಲ್ಲಿ ಉಂಟಾಗಿರುವ ವಿಳಂಬ ಸೇರಿ ಹಲವು ವಿಚಾರಗಳನ್ನು ಮತದಾರರಿಗೆ ತಲುಪಿಸಿ ಬಿಜೆಪಿಯನ್ನು ಮಣಿಸಲು ಇತರ ಪಕ್ಷಗಳು ಸಜ್ಜಾಗಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಐಕ್ಯತಾ ಸಮಾವೇಶವನ್ನು ಮಾಡಿದ ಕಾಂಗ್ರೆಸ್ ಹುಮ್ಮಸ್ಸಿನಲ್ಲಿದೆ. ಯಾವ ರಾಜಕೀಯ ಪಕ್ಷ ಕೂಡ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
***
ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಎದುರಾಳಿ ಯಾರಾಗುತ್ತಾರೆ ಎಂಬುದರ ಬಗ್ಗೆ ಹೆಚ್ಚು ಆಲೋಚಿಸುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚಿಸುವೆ.
ಜಿ.ಎಚ್.ತಿಪ್ಪಾರೆಡ್ಡಿ, ಶಾಸಕ
***
ಟಿಕೆಟ್ ಆಕಾಂಕ್ಷಿಗಳ ಸಾಮರ್ಥ್ಯವನ್ನು ಕೆಪಿಸಿಸಿ, ಎಐಸಿಸಿ ಚುನಾವಣಾ ವೀಕ್ಷಕರು ಪರಿಶೀಲಿಸುತ್ತಿದ್ದಾರೆ. ತಿಂಗಳ ಅಂತ್ಯಕ್ಕೆ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಎಂ.ಕೆ. ತಾಜ್‌ಪೀರ್, ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕ
***
ಚಿತ್ರದುರ್ಗ ಕ್ಷೇತ್ರದಲ್ಲಿ ಪಕ್ಷ ಪ್ರಬಲವಾಗಿದೆ. ಕಣಕ್ಕಿಳಿಸಲು ಸಮರ್ಥರಿಗಾಗಿ ಹುಡುಕಾಟ ನಡೆಯುತ್ತಿದೆ. ಸಂಕ್ರಾಂತಿ ಬಳಿಕ ಅಭ್ಯರ್ಥಿ ಘೋಷಣೆ ಆಗಲಿದೆ.
ಡಿ.ಯಶೋಧರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ
***
ಚಿತ್ರದುರ್ಗ ಕ್ಷೇತ್ರದಿಂದ ನಾನೇ ಸ್ಪರ್ಧಿಸಲಿದ್ದೇನೆ. ಕ್ಷೇತ್ರ ಸಂಚರಿಸಿ ಪಕ್ಷ ಸಂಘಟನೆ, ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.
ಬಿ.ಇ.ಜಗದೀಶ್, ಅಧ್ಯಕ್ಷ, ಎಎಪಿ ಜಿಲ್ಲಾ ಘಟಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.