ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಸಂಘ ಪರಿವಾರದ ಪ್ರಭಾವ ಬಳಸಿ ಮಠಾಧೀಶರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ.
ಮಠಾಧೀಶರನ್ನು ಚುನಾವಣಾ ಅಖಾಡಕ್ಕೆ ಇಳಿಸಿದರೆ ರಾಜ್ಯ ರಾಜಕಾರಣದ ಚಿತ್ರಣ ಬದಲಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ರಾಜಕೀಯ ಪ್ರವೇಶದ ಕುರಿತು ಸ್ವಾಮೀಜಿ ಈವರೆಗೆ ಯಾವುದೇ ನಿಲುವು ಪ್ರಕಟಿಸಿಲ್ಲ. ಸ್ವಾಮೀಜಿ ಅಭಿಪ್ರಾಯ ಆಧರಿಸಿ ಮುಂದುವರಿಯಲು ಬಿಜೆಪಿ ಇಚ್ಛಿಸಿದೆ.
ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ರಾಜಕಾರಣದಿಂದ ದೂರ ಉಳಿಯುವ ಇಂಗಿತ ವ್ಯಕ್ತಪಡಿಸಿದ ಪರಿಣಾಮ ಪಕ್ಷವು ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಪ್ರಯೋಗಕ್ಕೆ ಸಜ್ಜಾಗಿದೆ. ಸ್ಥಳೀಯರಿಗೆ ಅವಕಾಶ ನೀಡಬೇಕು ಎಂಬ ಕೂಗಿಗೂ ಮನ್ನಣೆ ನೀಡಿದಂತಾಗುತ್ತದೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.
ತುಮಕೂರು ಜಿಲ್ಲೆಯ ಶಿರಾ, ಪಾವಗಡ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ರಾಜ್ಯದ ಹಲವು ಭಾಗಗಳಲ್ಲಿ ದಲಿತ ಎಡಗೈ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಮಾದಾರ ಚನ್ನಯ್ಯ ಗುರುಪೀಠದ ಮಠಾಧೀಶರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಇತರ ಕ್ಷೇತ್ರಗಳಲ್ಲಿಯೂ ಅನುಕೂಲವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ.
2019ರ ಲೋಕಸಭಾ ಚುನಾವಣೆಯಲ್ಲಿಯೇ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಅಖಾಡಕ್ಕೆ ಇಳಿಸುವ ಪ್ರಯತ್ನ ನಡೆದಿತ್ತು. ಬಿಜೆಪಿ ಆಹ್ವಾನವನ್ನು ಸ್ವಾಮೀಜಿ ನಿರಾಕರಿಸಿದ ಬಳಿಕ ಎ.ನಾರಾಯಣಸ್ವಾಮಿ ಅವರಿಗೆ ಅವಕಾಶ ಸಿಕ್ಕಿತ್ತು. 2024ರ ಲೋಕಸಭಾ ಚುನಾವಣೆಗೆ ಮಠಾಧೀಶರನ್ನು ಕರೆತರುವ ಮತ್ತೊಂದು ಸುತ್ತಿನ ಪ್ರಯತ್ನಕ್ಕೆ ಬಿಜೆಪಿ ಮತ್ತು ಸಂಘ ಪರಿವಾರ ಮುಂದಾಗಿವೆ. ಸಂಘ ಪರಿವಾರದ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಸ್ವಾಮೀಜಿ ಈ ಆಹ್ವಾನವನ್ನು ನಿರಾಕರಿಸಲಿಕ್ಕಿಲ್ಲ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ಈ ಕುರಿತು ಪ್ರತಿಕ್ರಿಯೆ ಪಡೆಯಲು ‘ಪ್ರಜಾವಾಣಿ’ ಯತ್ನಿಸಿದರೂ ಸ್ವಾಮೀಜಿ ಸಂಪರ್ಕಕ್ಕೆ ಸಿಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.