ಚಿತ್ರದುರ್ಗ: ನೋಂದಾಯಿತ ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ₹ 5 ಲಕ್ಷ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಮಂಗಳವಾರ ಧರಣಿ ನಡೆಸಿದರು.
ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮಾರ್ಚ್ 12ರ ವರೆಗೂ ಧರಣಿ ಹಮ್ಮಿಕೊಂಡಿರುವ ಪ್ರತಿಭಟನಾಕಾರರು ರಾಜ್ಯ ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಮನೆಗಳ ನಿರ್ಮಾಣಕ್ಕಾಗಿ ₹ 76 ಕೋಟಿ ಅನುದಾನ ಬಿಡುಗಡೆ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಬಾಂಡ್ ರೂಪದಲ್ಲಿ ನೀಡುತ್ತಿರುವ ಸಹಾಯಧನ ನಿಲ್ಲಿಸಬೇಕು. ₹ 50 ಸಾವಿರ ನಗದು ರೂಪದಲ್ಲಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ಪಿಂಚಣಿ ಪಡೆಯುತ್ತಿರುವ ಕಟ್ಟಡ ಕಾರ್ಮಿಕರಿಗೆ ವೈದ್ಯಕೀಯ ಸಹಾಯಧನ ಮುಂದುವರೆಸಬೇಕು. ಪಿಂಚಣಿ ಸೌಲಭ್ಯ ₹ 4 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ನೋಂದಾಯಿತ ಕಟ್ಟಡ ಕಾರ್ಮಿಕರು ಮೃತಪಟ್ಟಾಗ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ. ಹೀಗಾಗಿ, ಅವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಬೇಕು. ಡಾ.ಬಿ.ಆರ್. ಅಂಬೇಡ್ಕರ್ ವಿಮೆ ಯೋಜನೆ ಕುಟುಂಬದ ಸದಸ್ಯರಿಗೂ ವಿಸ್ತರಿಸಬೇಕು. ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ಹೋಗಲು ನೆರವು ನೀಡಬೇಕು.ಮದುವೆ ಸಹಾಯಧನವಾಗಿ ₹ 1 ಲಕ್ಷ ನೀಡಬೇಕು. ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.