ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ 13 ವರ್ಷಗಳಿಂದ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಆಳ್ವಾಸ್ ಸಂಸ್ಥೆಯ ಐದು ಮಂದಿ ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ ಎಂದು ಆಳ್ವಾಸ್ ಕಾಲೇಜಿನ ಸ್ಥಾಪಕ ಅಧ್ಯಕ್ಷ ಡಾ. ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
126 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 34 ಮಂದಿ 620 ಕ್ಕಿಂತ ಹೆಚ್ಚು ಅಂಕ, 95 ಮಂದಿ 600 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಫಲಿತಾಂಶದ ದಿಕ್ಕು ಬದಲಾಯಿಸಿದ್ದಾರೆ. ದತ್ತು ಸ್ವೀಕಾರ ಯೋಜನೆಯ ಅನ್ವಯ ಇಲ್ಲಿನ 6 ರಿಂದ 10 ನೇ ತರಗತಿವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ, ಅಗತ್ಯ ಇರುವವರಿಗೆ ಉಚಿತ ವಸತಿ ಸೌಲಭ್ಯವನ್ನು ಸಂಸ್ಥೆ ನೀಡುತ್ತಿದೆ. ರಾಜ್ಯದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆ ವರವಾಗಿದೆ. ಗುಣಮಟ್ಟದ ಶಿಕ್ಷಣ, ಕಲಿಕೆಯ ಜತೆಗೆ ಮಕ್ಕಳ ವ್ಯಕ್ತಿತ್ವವನ್ನು ವಿಕಸನಗೊಳಿಸುವ ಯೋಗ, ಮಲ್ಲಕಂಬ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹೀಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡುತ್ತಿರುವುದರಿಂದ ಇಲ್ಲಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಒಟ್ಟು 560 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಈ ವರ್ಷ 11,000 ವಿದ್ಯಾರ್ಥಿಗಳು ಪ್ರವೇಶ ಬಯಸಿ ಬಂದಿರುವುದು ಇದರ ಸಕಾಲಿಕತೆಗೆ ಸಾಕ್ಷಿ. ಕನ್ನಡ ಮಾಧ್ಯಮ ಶಾಲೆಗೆ ಮಕ್ಕಳನ್ನು ಸೇರಿಸುವ ಮುನ್ನ ಹತ್ತು ಬಾರಿ ಯೋಚಿಸುವ ಇಂದಿನ ದಿನಗಳಲ್ಲಿ ಆಳ್ವಾಸ್ ಕನ್ನಡ ಶಾಲೆಯಲ್ಲಿ ಉಚಿತ ಹಾಗೂ ಉತ್ಕೃಷ್ಟ ದರ್ಜೆಯ ಶಿಕ್ಷಣವನ್ನು ನೀಡಿ ರಾಜ್ಯಕ್ಕೆ ಮಾದರಿ ಆಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.