ಮಂಗಳೂರು: ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ರಾಷ್ಟ್ರೀಯ ಬಿಲ್ಲವ, ಈಡಿಗ ಮಹಾಮಂಡಳಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಕುರಿತು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ರಾಜ್ಯ ಸಮಿತಿ ಉಪಾಧ್ಯಕ್ಷ ಜಿತೇಂದ್ರ ಜೆ.ಸುವರ್ಣ, ‘ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಬಿ.ಕೆ.ಹರಿಪ್ರಸಾದ್ ಪಾತ್ರವೂ ಪ್ರಮುಖವಾದುದು. ಅವರ ಬೆಂಬಲಕ್ಕೆ ಸಮುದಾಯವು ನಿಲ್ಲಲಿದೆ. ಇನ್ನೂ ಕಾಲ ಮಿಂಚಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಅತಿ ಹಿಂದುಳಿದ ವರ್ಗಗಳ ನಾಯಕರನ್ನು ತುಳಿಯಲಾಗುತ್ತಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಛಾಪು ಮೂಡಿಸಿರುವ ನಾಯಕನಿಗೆ ಅನ್ಯಾಯವಾದರೆ ಸಮುದಾಯ ಸಹಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಸಮುದಾಯದ ನಿಗಮಕ್ಕೂ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿಲ್ಲ. ಈ ಎಲ್ಲಾ ಬೆಳವಣಿಗೆಗಳನ್ನು ಸಹಿಸಲಾಗದು’ ಎಂದರು ಹೇಳಿದರು.
‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಅತೀ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಚಿಂತನಾ ಸಭೆಯನ್ನು ಸೆ.9ರಂದು ಹಮ್ಮಿಕೊಳ್ಳಲಾಗಿದೆ. ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ ಸಮುದಾಯದ ರಾಷ್ಟ್ರೀಯ ನಾಯಕರಾಗಿರುವ ಕೇಂದ್ರ ಸಚಿವ ಶ್ರೀಪಾದ್ ಎಸ್ಸೊ ನಾಯಕ್, ತೆಲಂಗಾಣದ ಸಚಿವ ಶ್ರೀನಿವಾಸ್ ಗೌಡ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ’ ಎಮದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಡಳಿಯ ಜಿಲ್ಲಾ ಸಮಿತಿ ಅಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್, ಉಪಾಧ್ಯಕ್ಷ ಪ್ರೇಮನಾಥ್, ಖಜಾಂಚಿ ಲೋಕನಾಥ್ ಪೂಜಾರಿ, ಮಹಿಳಾ ಕಾರ್ಯದರ್ಶಿ ಶೋಭಾ ಕೇಶವ್, ಸಂಘಟನಾ ಕಾರ್ಯದರ್ಶಿ ಸುರೇಶ್ ಪೂಜಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.