ADVERTISEMENT

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಆಗ್ರಹ

ರಾಜ್ಯದ ಸರ್ಕಾರದ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 6:19 IST
Last Updated 29 ಜೂನ್ 2024, 6:19 IST
ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು – ಪ್ರಜಾವಾಣಿ ಚಿತ್ರ 
ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು – ಪ್ರಜಾವಾಣಿ ಚಿತ್ರ    

ಮಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ‘ಜನರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಲೂಟಿ ಸರ್ಕಾರವಾಗಿ ಮಾರ್ಪಟ್ಟಿದೆ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ವಾಲ್ಮೀಕಿ ನಿಗಮದ ₹187 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಇಷ್ಟು ದೊಡ್ಡ ಹಗರಣ ನಡೆದರೂ ಮುಖ್ಯಮಂತ್ರಿ ಏನು ಆಗದವರಂತೆ ವರ್ತಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಒಂದರ ಹಿಂದೊಂದು ಭ್ರಷ್ಟಾಚಾರದ ಪ್ರಕರಣ ಅಂಟಿಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಸಮರ್ಪಕವಾಗಿ ಪಾವತಿಯಾಗುತ್ತಿಲ್ಲ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಗೆ ಅನುದಾನ ಸಿಗುತ್ತಿಲ್ಲ. ಜನವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್‌ ಜನ ಬೆಂಬಲ ಕಳೆದುಕೊಂಡಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ದೂರಿದರು.

ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ‘ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬೇನಾಮಿ ಹೆಸರಿಗೆ ವರ್ಗಾಯಿಸಲಾಗಿದೆ. ಸಿದ್ದರಾಮಯ್ಯ ಅವರು ತಾಕತ್ತಿದ್ದರೆ ವಕ್ಫ್‌ಬೋರ್ಡ್ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಣ ವರ್ಗಾಯಿಸಿ ತೋರಿಸಲಿ’ ಎಂದು ಸವಾಲು ಹಾಕಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಮತ್ತಿತರರು ಇದ್ದರು.

ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಹೇಳುತ್ತ ಬಿಜೆಪಿ ಕಾರ್ಯಕರ್ತರು ಕ್ಲಾಕ್‌ ಟವರ್ ಎದುರಿನಿಂದ ಹೊರಟಾಗ ಪೊಲೀಸರು ಬ್ಯಾರಿಕೇಡ್ ಇಟ್ಟು ಅವರನ್ನು ತಡೆಯಲು ಯತ್ನಿಸಿದರು. ಬ್ಯಾರಿಕೇಡ್ ತಳ್ಳಿ ಮುನ್ನುಗ್ಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮಹಿಳೆಯರನ್ನು ವಶಕ್ಕೆ ಪಡೆಯುವ ವೇಳೆ ಸೀರೆ ಎಳೆಯಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿ, ಪೂರ್ಣಿಮಾ ಮತ್ತಿತರರು ರಸ್ತೆಯ ನಡುವೆ ಧರಣಿ ಕುಳಿತರು. ಹಿರಿಯ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದ ಮೇಲೆ ಧರಣಿಯಿಂದ ಹಿಂದಕ್ಕೆ ಸರಿದರು.

ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು – ಪ್ರಜಾವಾಣಿ ಚಿತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.