ಮಂಗಳೂರು: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿಗೆ ವಿವಿಧ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ. ಸಂತ್ರಸ್ತ ವಿದ್ಯಾರ್ಥಿನಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಆಗ್ರಹಿಸಿವೆ.
‘ದುಷ್ಕರ್ಮಿಯಿಂದ ಆ್ಯಸಿಡ್ ದಾಳಿಗೆ ಒಳಗಾದ ಮೂವರು ವಿದ್ಯಾರ್ಥಿನಿಯರಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಪರಿಹಾರ ನೀಡುವುದಕ್ಕೂ ಕ್ರಮವಹಿಸುವಂತೆ ನಿರ್ದೇಶನ ನೀಡಿದ್ದೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
‘ಮಹಿಳೆಯರ ಮೇಲಿನ ಆ್ಯಸಿಡ್ ದಾಳಿ ಅಮಾನವೀಯ ಘಟನೆ. ಇದು ಖಂಡನೀಯ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಈ ಕೃತ್ಯ ನಡೆಸಿದ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ದುರ್ಘಟನೆ ಸಂಭವಿಸಲು ಸರ್ಕಾರದ ಧೋರಣೆಯೂ ಕಾರಣ. ಬಹುತೇಕ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಯಾವ ಭದ್ರತಾ ವ್ಯವಸ್ಥೆಯೂ ಇಲ್ಲ. ಈ ಲೋಪ ಸರಿಸಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆಯ (ಎಐಡಿಎಸ್‌ಒ) ಮಂಗಳೂರು ಘಟಕದ ಸಂಚಾಲಕ ವಿನಯಚಂದ್ರ ಒತ್ತಾಯಿಸಿದ್ದಾರೆ.
ಕೃತ್ಯವನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ‘ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಾಡಹಗಲೇ ಇಂತಹ ಘಟನೆ ನಡೆದರೆ, ಶಾಲಾ ಕಾಲೇಜುಗಳಿಗೆ ಯಾವ ಪೋಷಕರು ಮಕ್ಕಳನ್ನು ಧೈರ್ಯದಿಂದ ಕಳುಹಿಸಲು ಸಾಧ್ಯ? ಗೃಹಲಕ್ಷ್ಮಿ ಯೋಜನೆ ಕೋಡುತ್ತೇವೆ ಎನ್ನುವ ಕಾಂಗ್ರೆಸ್‌ಗೆ ಈ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾಗಲ್ಲವೇ' ಎಂದು ಪ್ರಶ್ನಿಸಿದ್ದಾರೆ.
'ಬಂಧಿತ ಆರೋಪಿಯ ಹಿನ್ನೆಲೆಯನ್ನು ಕೂಲಂಕಷವಾಗಿ ತನಿಖೆಗೆ ಒಳಪಡಿಸಬೇಕು. ಆತನಿಗೆ ತಕ್ಕ ಶಿಕ್ಷೆ ಕೊಡಿಸಬೇಕು. ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನೂ ಸರ್ಕಾರವೇ ಭರಿಸಿ, ಪರಿಹಾರವನ್ನೂ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ನಡೆಸಿದ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.