ಮಂಗಳೂರು: ‘ಡೆಂಗಿ ಚಿಕಿತ್ಸೆಗೆ ದಾಖಲಾಗುವ ರೋಗಿಗಳಿಗೆ ನೀಡುವ ರಕ್ತದ ಪ್ಲೇಟ್‌ಲೆಟ್‌ಗಳಿಗೆ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಜಾಸ್ತಿ ದರ ವಸೂಲಿ ಮಾಡುತ್ತಿರುವ ದೂರುಗಳಿವೆ. ಇದಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ನಿಗಾ ಇಡಬೇಕು’ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಕ್ರಮಗಳ ಬಗ್ಗೆ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಶನಿವಾರ ಅವರು ಸಭೆ ನಡೆಸಿದರು. ಡೆಂಗಿ ಚಿಕಿತ್ಸೆಗೆ ರೋಗಿಗಳು ಸಮಸ್ಯೆ ಎದುರಿಸುವ ಸ್ಥಿತಿ ತಲೆದೋರಬಾರದು. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆ, ರಕ್ತ ಪೂರೈಕೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.
‘ಆಯಾ ತಾಲ್ಲೂಕಿನ ಆರೋಗ್ಯಾಧಿಕಾರಿಗಳು ಡೆಂಗಿ ನಿಯಂತ್ರಣದ ಸಂಪೂರ್ಣ ಜವಾಬ್ದಾರಿ ವಹಿಸಬೇಕು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಯೋಗಾಲಯ ತಂತ್ರಜ್ಞರ ಕೊರತೆ ಇದ್ದರೆ ಅವರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಬೇಕು. ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಪ್ರತಿದಿನವೂ ಗ್ರಾಮ ಮತ್ತು ಪಟ್ಟಣಗಳಲ್ಲಿ ಫಾಗಿಂಗ್ ಮಾಡಬೇಕು’ ಎಂದು ನಿರ್ದೇಶನ ನೀಡಿದರು.
‘ನಿರ್ಮಾಣ ಹಂತದ ಕಟ್ಟಡಗಳನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಇದಕ್ಕಾಗಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಕಾರ್ಮಿಕರಿಗೆ ಸೊಳ್ಳೆ ಪರದೆ ಒದಗಿಸಬೇಕು. ಪಾಲಿಕೆಯು ವಿವಿಧೋದ್ದೇಶದ ಕಾರ್ಯಕರ್ತರನ್ನು ಸದ್ಯಕ್ಕೆ ಡೆಂಗಿ ನಿರ್ವಹಣೆಗೆ ಮಾತ್ರ ಬಳಸಬೇಕು’ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಡಿಸಿಪಿ (ಅಪರಾಧ ಮತ್ತು ಸಂಚಾರ) ದಿನೇಶ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನಚಂದ್ರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.