ಮಂಗಳೂರು: ಖಾತೆ ಬದಲಾವಾಣೆಗಾಗಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಲಂಚ ಪಡೆದ ಆರೋಪದ ಮೇಲೆ ಕೌಕ್ರಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಮಹೇಶ್ ಜಿ.ಎನ್. ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದರು.
'ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಜಮೀನಿನ ಖಾತೆಯನ್ನು ತಮ್ಮ ಹೆಸರಿಗೆ ಬದಲಾಯಿಸಲು 2017ರಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆ ಆಗದೇ ಇದ್ದುದರಿಂದ 2021ನೇ ಇಸವಿಯಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದರು. ಶುಲ್ಕವನ್ನು ಸಂದಾಯ ಮಾಡಿದರೂ ಸಹ ಅವರ ಹೆಸರಿಗೆ ಖಾತೆ ಬದಲಾವಣೆ ಆಗಿರಲಿಲ್ಲ. ಹಾಗಾಗಿ ಅವರು 2023ರ ಜೂನ್ 20 ರಂದು ಕೌಕ್ರಾಡಿ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಈ ಬಗ್ಗೆ ವಿಚಾರಿಸಿದ್ದರು. ಆಗ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್.ಜಿ.ಎನ್ ಅವರು ಈ ಕೆಲಸ ಮಾಡಿಕೊಡಲು ₹ 20,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರ ವ್ಯಕ್ತಿ ನಮಗೆ ದೂರು ನೀಡಿದ್ದರು' ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ. 'ಆರೋಪಿ ಪಿಡಿಒ ಅವರು ಬುಧವಾರ ಅರ್ಜಿದಾರದಿಂದ ₹ 20,000 ಲಂಚದ ಹಣವನ್ನು ಪಡೆದಿದ್ದು, ತಕ್ಷಣವೇ ಅವರನ್ನು ಸ್ಥಳದಲ್ಲಿಯೇ ದಸ್ತಗಿರಿ ಮಾಡಿದ್ದೇವೆ. ಅವರು ಅರ್ಜಿ ದಾರರಿಂದ ಪಡೆದ ಲಂಚದ ಹಣವನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಯನ್ನು ಶೀಘ್ರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದೇವೆ' ಎಂದು ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ, ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್ ತಿಳಿಸಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪಿಎಸ್ಐಗಳಾದ ಕಲಾವತಿ.ಕೆ, ಚಲುವರಾಜು.ಬಿ, ಇನ್ ಸ್ಪೆಕ್ಟರ್ ಗಳಾದ ಅಮಾನುಲ್ಲಾ.ವಿ, ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ ಎಂದೂ ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.