ಮಂಗಳೂರು: ಮಳೆಯಿಂದ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪದಂತಹ ಯಾವುದೇ ಸಮಸ್ಯೆ ಎದುರಾದರೆ ತುರ್ತು ಸೇವೆಗೆ ಜಿಲ್ಲಾ ಆಡಳಿತದ ಟೋಲ್ ಫ್ರೀ ಸಂಖ್ಯೆ: 1077 ಅಥವಾ ದೂರವಾಣಿ 0824–2442590 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ನೀರು ನಿಂತಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ನಿರ್ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಇದನ್ನೂ ಓದಿ:ದಕ್ಷಿಣ ಕನ್ನಡ: ನಾಳೆ ಶಾಲಾ ಕಾಲೇಜುಗಳಿಗೆ ರಜೆ
ಜಿಲ್ಲಾ ಆಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿ ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು, ಅವುಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.
ಜುಲೈ 4ರಿಂದ 7ರ ವರೆಗೆ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಅತಿ ಹೆಚ್ಚು ಮಳೆಯಾಗುವ ಸಂಭವವಿದೆ. ಪ್ರತಿ ತಾಲ್ಲೂಕು ಘಟಕಗಳು/ ತಾಲ್ಲೂಕು ವಿಪತ್ತು ನಿರ್ವಹಣಾ ಸಮಿತಿಗಳು ಸನ್ನದ್ಧವಾಗಿರಬೇಕು ಎಂದು ಅವರು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.