ಮಂಗಳೂರು: ‘ತಮ್ಮ ಸರ್ಕಾರವಿದ್ದಾಗ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಆದೇಶವನ್ನೇ ಮಾಡಿರಲಿಲ್ಲ ಎಂದು ಶಾಸಕ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಹಿಜಾಬ್ ನಿಷೇಧಿಸಿದ್ದರೂ ಅದನ್ನು ಮರುಪರಿಶೀಲನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಚಾರದಲ್ಲಿ ಸಾಧಕ–ಬಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ಗೃಹಸಚಿವ ಜಿ.ಪರಮೇಶ್ವರ ಹೇಳಿದರು.
ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಅವಶ್ಯಕತೆಯಿಲ್ಲ’ ಎಂದರು.
‘ಮುಸ್ಲಿಂ ಸಮುದಾಯದವರು ಹಿಂದಿನಿಂದಲೂ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿಕೊಂಡು ಬರುತ್ತಿದ್ದರು. ಬಿಜೆಪಿ ನೇತೃತ್ವದ ಸರ್ಕಾರ ಬಂದಾಗ ಹಿಜಾಬ್ ಧರಿಸುವ ಬಗ್ಗೆ ಬೇರೆ ಬೇರೆ ವ್ಯಾಖ್ಯಾನಗಳಾಗಿವೆ. ಸಂವಿಧಾನದ ಚೌಕಟ್ಟಿನಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಂವಿಧಾನದ ಆಶಯಗಳಿಗೆ ಹೊರತಾಗಿ ನಾವು ಯಾವುದೇ ಕೆಲಸ ಮಾಡುವುದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ತೀರ್ಮಾನ ತೆಗೆದುಕೊಂಡಾಗ ಕೆಲವರಿಗೆ ನೋವಾಗಬಹುದು ಕೆಲವರಿಗೆ ಸಂತೋಷವಾಗಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.