ADVERTISEMENT

ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ: ರಾಮಲಿಂಗಾ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 14:27 IST
Last Updated 25 ಜೂನ್ 2024, 14:27 IST
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ   

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಬೆಂಗಳೂರಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್‌ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅವಧಿ 2024ರ ಮಾರ್ಚ್‌ಗೆ ಕೊನೆಗೊಂಡಿದ್ದು, ಸದ್ಯ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.

ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸುವ ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇತ್ತು. ಆದರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ₹ 100 ಕೋಟಿಗೂ ಅಧಿಕ ಆದಾಯ ಬರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಬಗ್ಗೆ ಸಚಿವರು ಆಸಕ್ತಿ ಹೊಂದಿದ್ದರು. ಹೀಗಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಪ್ರಸ್ತಾವ ಕೈಬಿಡಲಾಗಿದೆ.

ADVERTISEMENT

ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಯ ಬಗ್ಗೆ ಪ್ರಸ್ತಾವ ಸಿದ್ಧಪಡಿಸಿ ಮುಂದಿನ ವಿಧಾನಮಂಡಳ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ, ಪುತ್ತೂರು, ನೆಟ್ಲ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.